ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹುಯಿಲ್‌ದೊರೆ ಕಾವಲ್ ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಹೇಮಂತ್ (8) ಗುರುವಾರ ಮೃತಪಟ್ಟಿದ್ದಾನೆ.
ಹೇಮಂತ್ 2ನೇ ತರಗತಿಯಲ್ಲಿ ಓದುತ್ತಿದ್ದ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳಿದ್ದ. ನಂತರ ಮನೆಯಿಂದ ವಾಪಸ್ ಬಂದು ಶಾಲೆಯ ಹಿಂಭಾಗದಲ್ಲಿ ಆಟವಾಡಲು ಹೋಗಿದ್ದಾನೆ. ಈ ಸಮಯದಲ್ಲಿ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾನೆ.
ವಿದ್ಯುತ್ ಕಂಬದಲ್ಲಿ ಜೋತು ಬಿದ್ದಿರುವ ತಂತಿ ಸರಿಪಡಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಶಿರಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.