ಭಾನುವಾರ, ಮಾರ್ಚ್ 7, 2021
29 °C
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿಕೆ

ನರೇಗಾ ಅನುಷ್ಠಾನ: ಸೆ.10ರಿಂದ ಜಾಗೃತಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ತುಮಕೂರು: 2019-20ನೇ ಸಾಲಿನ ನರೇಗಾ ಯೋಜನೆಯ ಕ್ರಿಯಾಯೋಜನೆ ಮತ್ತು ಅನುಷ್ಠಾನ ಕುರಿತಂತೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಕಾರ್ಯಕ್ರಮವನ್ನು ಸೆ.10 ರಿಂದ 22ರವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದರು.

ಮಂಗಳವಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮದ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರು, ಸಮೂಹ ಮಾಧ್ಯಮಗಳ ಮೂಲಕ ಪ್ರಚಾರ ನೀಡಲಾಗುವುದು. ಪ್ರತಿ ತಾಲ್ಲೂಕಿನಲ್ಲಿ 5ರಿಂದ 10 ಪಂಚಾಯಿತಿಗಳಲ್ಲಿ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲಾಗುವುದು. ಅ.2ರಂದು ಸಾಂಕೇತಿಕವಾಗಿ ಒಂದು ಗ್ರಾಮ ಪಂಚಾಯಿತಿಯಲ್ಲಿ ವಾರ್ಡ್ ಸಭೆ ನಡೆಸಲಾಗುವುದು ಎಂದು ವಿವರಿಸಿದರು.

‘ನರೇಗಾ ಯೋಜನೆಯಡಿ ಶಾಲಾ ಕಾಂಪೌಂಡ್, ಶೌಚಾಲಯ, ಅಂಗನವಾಡಿ ಶೌಚಾಲಯ ನಿರ್ಮಾಣ, ಅಕ್ಷರ ದಾಸೋಹ, ಅಡುಗೆ ಕೇಂದ್ರ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು’ ಎಂದರು.

ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಏಕೀಕೃತ ತಂತ್ರಾಂಶದಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಮಂಜೂರಾತಿ ನಿರ್ವಹಿಸಲು ಏಕೀಕೃತ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮ ಅನುಷ್ಠಾನಗೊಳಿಸಲು ತಾಲ್ಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ನೋಡೆಲ್ ಅಧಿಕಾರಿಗಳಾಗಿರುತ್ತಾರೆ ಎಂದು ಅವರು ಹೇಳಿದರು.

‘1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುವ 1,87,736 ವಿದ್ಯಾರ್ಥಿಗಳು ವಾರ್ಷಿಕವಾಗಿ ಪ್ರಯೋಜನ ಪಡೆಯಲಿದ್ದಾರೆ’ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಪ್ರತಿ ತಾಲ್ಲೂಕಿಗೆ 30 ನೋಂದಣಿ ಕೇಂದ್ರ ತೆರೆಯಲಾಗಿದೆ. ಹೆಚ್ಚಿನ ಮಾಹಿತಿಗೆ ssp.karnataka.gov.in ಸಂಪರ್ಕಿಸಬಹುದು. ವಿದ್ಯಾರ್ಥಿ ವೇತನ ನೋಂದಣಿ ಜವಾಬ್ದಾರಿ ಆಯಾ ಶಾಲೆ ಮುಖ್ಯ ಶಿಕ್ಷಕರು ಹಾಗೂ ತಾಲ್ಲೂಕಿನ ನೋಡೆಲ್ ಅಧಿಕಾರಿಗೆ ಸೇರಿರುತ್ತದೆ ಎಂದರು.

ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್‌ಕುಮಾರ್ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು