ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸ್ತುಪ್ರದರ್ಶನದಲ್ಲಿ ಹೊಸತನ ಅಗತ್ಯ

ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರೆ
Last Updated 8 ನವೆಂಬರ್ 2019, 17:30 IST
ಅಕ್ಷರ ಗಾತ್ರ

ತುಮಕೂರು: ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ 2020ರ ಜ.6 ರಿಂದ 22ರವರೆಗೆ ನಡೆಯಲಿರುವ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರೆಯಲ್ಲಿ ಸರ್ಕಾರದ ಸಾಧನೆಗಳ ಕುರಿತು ವಿವಿಧ ಇಲಾಖೆಗಳಿಂದ ಏರ್ಪಡಿಸುವ ವಸ್ತುಪ್ರದರ್ಶನವು ಅತ್ಯಾಕರ್ಷಕ ಹಾಗೂ ಹೊಸತನದಿಂದ ಕೂಡಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಾತ್ರೆ ಸಂಬಂಧ ಶುಕ್ರವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

ಪ್ರತಿ ವರ್ಷದಂತೆ ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಆಯಾ ಇಲಾಖೆಯವರು ತಮ್ಮ ಕಾರ್ಯಕ್ರಮ ಹಾಗೂ ಸಾಧನೆ ಕುರಿತು ಮಳಿಗೆಗಳನ್ನು ತೆರೆಯಬೇಕು. ವಸ್ತುಪ್ರದರ್ಶನದಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಫ್ಲೆಕ್ಸ್ ಮತ್ತಿತರ ಪ್ರಚಾರ ಸಾಮಗ್ರಿಗಳಿಗೆ ಪ್ಲಾಸ್ಟಿಕ್ ಬಳಸಬಾರದು ಎಂದು ಎಚ್ಚರಿಕೆ ನೀಡಿದರು.

ಶಿಕ್ಷಣ ಇಲಾಖೆಯಿಂದ ಮಕ್ಕಳಿಗಾಗಿ ವಿಜ್ಞಾನ ವಸ್ತುಪ್ರದರ್ಶನ ಹಮ್ಮಿಕೊಳ್ಳಬೇಕು. ನಾಸಾ ವಿಜ್ಞಾನಿಗಳನ್ನು ಕರೆಯಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ‌ನಡೆಸಬೇಕು. ಎಸ್ಸೆಸ್ಸೆಲ್ಸಿ ನಂತರ ಯಾವ ಕೋರ್ಸ್ ಓದಬೇಕು ಎನ್ನುವ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.

ಅರಣ್ಯ ಇಲಾಖೆಯಿಂದ ಬೀಜದುಂಡೆ ತಯಾರಿಕೆ, ನಡುತೋಪು ನಿರ್ಮಾಣದ ಪ್ರಾತ್ಯಕ್ಷಿಕೆಯೊಂದಿಗೆ ವಿವಿಧ ಸಸಿಗಳನ್ನು ಪ್ರದರ್ಶನಕ್ಕಿಟ್ಟು ಮಾಹಿತಿ ನೀಡಬೇಕು. ಜನಾಕರ್ಷಣೆಗಾಗಿ ಪರಿಸರ ರಕ್ಷಣೆ ಬಗ್ಗೆ ಘೋಷವಾಕ್ಯವೊಂದನ್ನು ಬರೆಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಿರಿಯರು ಹಾಗೂ ಮಕ್ಕಳಿಗೆ ಪ್ರತ್ಯೇಕವಾಗಿ ಸೆಲ್ಫಿ ಪಾಯಿಂಟ್ ವ್ಯವಸ್ಥೆ ಮಾಡಬೇಕು.

ಜಾತ್ರೆಯಲ್ಲಿ ಉಚಿತ ರಕ್ತದಾನ ಶಿಬಿರ, ಆರೋಗ್ಯದಂತ ತಪಾಸಣಾ ಶಿಬಿರ ಏರ್ಪಡಿಸಬೇಕು. ಹಾವು, ನಾಯಿ ಕಡಿತಕ್ಕೆ ಪ್ರಥಮ ಚಿಕಿತ್ಸೆ ಕುರಿತು ವಿಡಿಯೊ ಪ್ರದರ್ಶಿಸಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು.

ಅಸ್ಪೃಶ್ಯತೆ ನಿವಾರಣೆಗೆ ಸಂಬಂಧಿಸಿದಂತೆ ಬೀದಿ ನಾಟಕಗಳನ್ನು ಹಮ್ಮಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆಗೆ, ಸಿರಿಧಾನ್ಯಗಳಿಂದ ಆಹಾರ ತಯಾರಿಸುವ ಪ್ರಾತ್ಯಕ್ಷಿಕೆ ನೀಡಲು ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಯೋಜನಾಧಿಕಾರಿ, ಮಂಜುನಾಥ್, ಶಿರಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮೋಹನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾ ಕುಮಾರಿ ಇದ್ದರು.

ಕಾಟಾಚಾರಕ್ಕೆ ಮಳಿಗೆ ತೆರೆಯದಿರಿ

ಜಾತ್ರೆಯಲ್ಲಿ ಶಿಕ್ಷಣ, ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ, ಮೀನುಗಾರಿಕೆ, ಕೈಮಗ್ಗ ಮತ್ತು ಜವಳಿ, ವಾರ್ತಾ ಮತ್ತು ಸಾರ್ವಜನಿಕ, ಆರೋಗ್ಯ, ಯುವ ಸಬಲೀಕರಣ ಮತ್ತು ಕ್ರೀಡಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 13 ಇಲಾಖೆಗಳು ವಸ್ತುಪ್ರದರ್ಶನದಲ್ಲಿ ಭಾಗವಹಿಸಲಿವೆ. ಕಾಟಾಚಾರಕ್ಕೆ ಮಳಿಗೆಗಳನ್ನು ತೆರೆಯದೆ ಎಲ್ಲ ಇಲಾಖೆಗಳು ಸರ್ಕಾರದ ಯೋಜನೆ ಹಾಗೂ ಸಾಧನೆಗಳ ಬಗ್ಗೆ ಜನರಿಗೆ ಉಪಯುಕ್ತ ಮಾಹಿತಿ ನೀಡಬೇಕು. ಜನರಿಗೆ ಮಾಹಿತಿ ನೀಡಲು ಎಲ್ಲ ಮಳಿಗೆಗಳಲ್ಲಿ ತಪ್ಪದೇ ಸಿಬ್ಬಂದಿ ನೇಮಿಸಬೇಕು ಎಂದು ಶುಭಾ ಕಲ್ಯಾಣ್ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT