ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಹಕ್ಕು ಅರಿವು ಅಗತ್ಯ: ಜಿಲ್ಲಾ ಪಂಚಾಯಿತಿ ಸಿಇಒ ಕೆ.ವಿದ್ಯಾಕುಮಾರಿ

Last Updated 19 ನವೆಂಬರ್ 2021, 3:47 IST
ಅಕ್ಷರ ಗಾತ್ರ

ತುಮಕೂರು: ಉತ್ತಮ ಗುರಿ, ಉದ್ದೇಶಗಳು ಮಕ್ಕಳ ಮುಂದಿನ ಸಾಧನೆಗೆ ಪೂರಕ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ಸಲಹೆ ನೀಡಿದರು.

ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯುನಿಸೆಫ್, ಜಿ.ಪಂ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಮಾತನಾಡಿದರು.

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಕೊಡಿಸುವುದು ಮಕ್ಕಳು, ಪೋಷಕರ ಆದ್ಯತೆಯಾಗಬೇಕು. ಪ್ರತಿ ಮಗು ಕಡ್ಡಾಯವಾಗಿ ಶಿಕ್ಷಣ ಪಡೆಯುವಂತಾಗಬೇಕು ಎಂದು ತಿಳಿಸಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ್, ‘ಶಾಲೆ, ಮನೆ, ಇತರೆಡೆ ಭಯ, ಕಿರಿ-ಕಿರಿ ಉಂಟು ಮಾಡುವ ಘಟನೆಗಳು ನಡೆದರೆ ವಿಳಂಬ ಮಾಡದೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳುವಷ್ಟು ಸಮರ್ಥರಾಗಬೇಕು’ ಎಂದು ಮಕ್ಕಳಿಗೆ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ‘ಶಾಲಾ ಹಂತದಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಸಂವಿಧಾನ, ಹಕ್ಕು, ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಪೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.

ಡಿವೈಎಸ್‍ಪಿ ರಾಧಾಕೃಷ್ಣ, ‘ಮಕ್ಕಳು, ಸಾರ್ವಜನಿಕರ ಹಕ್ಕುಗಳಿಗೆ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸಲು ಜಿಲ್ಲೆಯಲ್ಲಿ ‘ಕಲ್ಪತರು ಪಡೆ’ ನೇಮಿಸಲಾಗಿದೆ. ಸಮಸ್ಯೆಗೆ ಸಿಲುಕಿದರೆ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಬಹುದು’ ಎಂದರು.

ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ನಂದಕುಮಾರ್, ಡಿಡಿಪಿಐ ಸಿ.ನಂಜಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಶಾಲಿನಿ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ, ಅಲೆಮಾರಿ, ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣ, ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ರಕ್ಷಣೆ, ಮಂಜೂರಾಗದ ವಿದ್ಯಾರ್ಥಿ ವೇತನ, ಇನ್ನಿತರ ಅಹವಾಲುಗಳನ್ನು ಅಧಿಕಾರಿಗಳ ಮುಂದಿಟ್ಟು ಸಲಹೆ, ಸೂಚನೆ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT