ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ ಪ್ರತ್ಯೇಕ ಜಿಲ್ಲೆಯ ಬೇಡಿಕೆ ಪರಿಶೀಲನೆ: ಸಿದ್ದರಾಮಯ್ಯ

Published 6 ಸೆಪ್ಟೆಂಬರ್ 2023, 12:56 IST
Last Updated 6 ಸೆಪ್ಟೆಂಬರ್ 2023, 12:56 IST
ಅಕ್ಷರ ಗಾತ್ರ

ತುಮಕೂರು: ರಾಜ್ಯದ 54 ಲಕ್ಷಕ್ಕೂ ಅಧಿಕ ಮಕ್ಕಳು ಕ್ಷೀರ ಭಾಗ್ಯ ಯೋಜನೆಯ ನೆರವು ಪಡೆದುಕೊಳ್ಳುತ್ತಿದ್ದಾರೆ. ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತಾಗಿದೆ. ಈ ಯೋಜನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಧುಗಿರಿಯಲ್ಲಿ ಬುಧವಾರ  ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು‌ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲ ವರ್ಗ, ಜಾತಿ, ಧರ್ಮ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಹತ್ತು ವರ್ಷಗಳಿಂದ ಪ್ರತಿ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುವಂತೆ ಮಾಡಿದ್ದೇವೆ ಎಂದರು.

ಮಧುಗಿರಿ ಪ್ರತ್ಯೇಕ ಜಿಲ್ಲೆಯ ಬೇಡಿಕೆ ಪರಿಶೀಲನೆ: ಸಿದ್ದರಾಮಯ್ಯ

ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮ ರೂಪಿಸಿದರೆ ಬಿಜೆಪಿಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ‌ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಸುಳ್ಳು ಹೇಳಿದರು ಎಂದು ಟೀಕಿಸಿದರು.

ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬೇಡಿಕೆ ಪರಿಶೀಲಿಸಲಾಗುವುದು. ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಹಾಕಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗೃಹ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ , ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ , ಶಾಸಕರಾದ ರಂಗನಾಥ್, ಷಡಕ್ಷರಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT