ಮಂಗಳವಾರ, ಅಕ್ಟೋಬರ್ 4, 2022
27 °C

ರಸ್ತೆ ಗುಂಡಿ ಮುಚ್ಚಲು ಕಾಂಗ್ರೆಸ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವುದರ ಜೊತೆಗೆ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಅಲ್ಪಸಂಖ್ಯಾತರ ವಿಭಾಗದಿಂದ ನಗರದಲ್ಲಿ ಸೋಮವಾರ ಮಹಾನಗರ ಪಾಲಿಕೆ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ನಗರದ ದಾನ ಪ್ಯಾಲೇಸ್‌ ವೃತ್ತದಿಂದ ಕುಣಿಗಲ್‌ ರಸ್ತೆ ಮುಖಾಂತರ ಬಿಜಿಎಸ್‌ ವೃತ್ತದವರೆಗೆ ಪಾದಯಾತ್ರೆ ನಡೆಯಿತು. ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ರಸ್ತೆ ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಪಾಲಿಕೆಯ ಮೇಯರ್‌ ಎಂ. ಪ್ರಭಾವತಿ ಮತ್ತು ಆಯುಕ್ತೆ ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.

ಸ್ಮಾರ್ಟ್‌ ಸಿಟಿಯ ರಸ್ತೆಗಳು ಅಧ್ವಾನದ ಹಾದಿ ಹಿಡಿದಿವೆ. ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಮುಂದಿನ 15 ದಿನಗಳ ಒಳಗೆ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡರು ಎಚ್ಚರಿಸಿದರು.

ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹ್ಮದ್‌, ‘ಹಲವು ರಸ್ತೆಗಳು ವಾಹನ ಓಡಾಡಲು ಸಾಧ್ಯವಾಗದಷ್ಟು ಹಾಳಾಗಿವೆ. ಬಡವರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಕೂಲಿ ಕಾರ್ಮಿಕರು ವಾಸ ಮಾಡುತ್ತಿರುವ ಬಡಾವಣೆಗಳಲ್ಲಿನ ರಸ್ತೆ ಅಭಿವೃದ್ಧಿಗೆ ಯಾವುದೇ ಜನಪ್ರತಿನಿಧಿ, ಅಧಿಕಾರಿಗಳು ಮುಂದಾಗುತ್ತಿಲ್ಲ’ ಎಂದು ದೂರಿದರು.

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಹೈರಾಣಾಗಿದ್ದಾರೆ. ಒಳಚರಂಡಿಯ ನೀರು ಭೀಮಸಂದ್ರ ಕೆರೆ ಸೇರುತ್ತಿದೆ. ಒಂದೇ ಕಡೆಯಿಂದ ನೀರು ಹರಿಯುವುದರಿಂದ ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗುತ್ತಿವೆ. ಇದನ್ನು ತಪ್ಪಿಸಲು ಕೊಳಚೆ ನೀರು ಒಂದೇ ಕಾಲುವೆ ಬದಲಾಗಿ, ಎರಡ್ಮೂರು ಕಡೆಗಳಿಂದ ಕೆರೆಗೆ ಹೋಗುವಂತೆ ಮಾಡಿದರೆ ತುಂಬಾ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ರೇವಣ್ಣಸಿದ್ದಯ್ಯ, ಬಿ.ಜಿ. ಲಿಂಗರಾಜು, ಶಿವಾಜಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.