ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕಾಂಗ್ರೆಸ್; ರಾಜ್ಯಮಟ್ಟದ ‘ಜನ ಜಾಗೃತಿ ಅಭಿಯಾನ’

Last Updated 17 ನವೆಂಬರ್ 2021, 4:54 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮತ್ತೊಮ್ಮೆ ಸಜ್ಜಾಗಿದ್ದು, ರಾಜ್ಯಮಟ್ಟದ ‘ಜನ ಜಾಗೃತಿ ಅಭಿಯಾನ’ಕ್ಕೆ ತುಮಕೂರು ನಗರದಲ್ಲಿ ನ. 21ರಂದು ಚಾಲನೆ ನೀಡಲಿದೆ.

ಈವರೆಗೆ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದ ಸಮಯದಲ್ಲಿ ನೀಡಿದ ಕೊಡುಗೆ, ಸಾಧನೆಗಳ ಬಗ್ಗೆ ಜನರಿಗೆ ತಿಳಿಸಿಕೊಡುವ ಸಲುವಾಗಿ ಜನ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅದಕ್ಕೆ ಜಿಲ್ಲೆಯಿಂದ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.

ಸ್ವಾತಂತ್ರ್ಯ ಬಂದ ನಂತರ ರಾಷ್ಟ್ರದಲ್ಲಿ ಕಾಂಗ್ರೆಸ್ ಸಾಕಷ್ಟು ವರ್ಷಗಳ ಕಾಲ ಆಡಳಿತ ನಡೆಸಿದೆ. ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಪಕ್ಷದ ಕೊಡುಗೆ ಅಪಾರವಾಗಿದೆ. ಆದರೆ ಬಿಜೆಪಿಯವರು ನಮ್ಮ ವಿರುದ್ಧ ಸುಳ್ಳು ಹೇಳಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ತಾವು ಮಾಡಿದ್ದೇ ಸರಿ, ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ ಎಂದು ಹೇಳುತ್ತಲೇ ಇದ್ದಾರೆ. ಹಾಗಾಗಿ ಜನರಿಗೆ ಸತ್ಯ ತಿಳಿಸುವ ಸಲುವಾಗಿ, ಬಿಜೆಪಿಯವರಿಗೆ ಪ್ರತ್ಯುತ್ತರ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಪಕ್ಷ ನೀಡಿದ ಪ್ರಮುಖ ಕಾರ್ಯಕ್ರಮಗಳು, ಅಭಿವೃದ್ಧಿ ಕೆಲಸ, ಕೊಟ್ಟ ಕೊಡುಗೆ, ಸಾಮಾಜಿಕ ನ್ಯಾಯ ಕಾಪಾಡಿರುವುದು ಮೊದಲಾದ ವಿಚಾರಗಳನ್ನು ಅಭಿಯಾನದ ಮೂಲಕ ಜನರ ಮುಂದಿಡಲಾಗುವುದು. ಇದನ್ನು ಜಿಲ್ಲಾ, ತಾಲ್ಲೂಕು ಮಟ್ಟದಿಂದ ಪಂಚಾಯಿತಿ, ಬೂತ್ ಮಟ್ಟದವರೆಗೂ ತೆಗೆದುಕೊಂಡು ಹೋಗಲಾಗುವುದು ಎಂದರು.

‘ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುವ ವಿಚಾರ ಬಂದಾಗ ನಾನೂ ಆಕಾಂಕ್ಷಿ. ಎಲ್ಲಕ್ಕಿಂತಲೂ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ನಂತರ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ನಿರ್ಧರಿಸಲಾಗುತ್ತದೆ. ಈಗಲೇ ಇಂತಹವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಲಾಗದು. ಸಮಯ ಬಂದಾಗಎಲ್ಲವೂ ನಿರ್ಧಾರವಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ಎಸ್.ಪಿ.ಮುದ್ದಹನುಮೇ ಗೌಡ ಅವರಿಗೆ ಕಳೆದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಗಲಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ಕೇಳುತ್ತಿದ್ದಾರೆ. ಅದು ಅವರ ಹಕ್ಕು. ಆದರೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷದಲ್ಲಿ ಸಣ್ಣಪುಟ್ಟ ತಪ್ಪುಗಳಾಗಿರುತ್ತವೆ. ಆದರೆ ಯಾರನ್ನೂ ಕಡೆಗಣಿಸಿಲ್ಲ ಎಂದು ಅವರು ಹೇಳಿದರು.

ಶಾಸಕ ಎಸ್.ಆರ್.ಶ್ರೀನಿವಾಸ್ ಪಕ್ಷಕ್ಕೆ ಬಂದರೆ ಗುಬ್ಬಿ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅದು ಅವರ ವೈಯಕ್ತಿಕ ಅಭಿಪ್ರಾಯ. ಪಕ್ಷಕ್ಕೆ ಸೇರಿಸಿಕೊಳ್ಳಬೇಕೆ, ಬೇಡವೆ ಎಂಬ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ. ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ. ಪಕ್ಷಕ್ಕೆ ಸೇರಿಸಿಕೊಳ್ಳಲು ಸ್ಥಳೀಯ ಮುಖಂಡರ ವಿರೋಧವನ್ನೂ ಗಮನಿಸಲಾಗುತ್ತಿದೆ’ ಎಂದು ತಿಳಿಸಿದರು.

ಸದಸ್ಯತ್ವ ಅಭಿಯಾನ: ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಆರಂಭವಾಗಿದ್ದು, ನೇರವಾಗಿ ಅಥವಾ ಆನ್‌ಲೈನ್ ಮೂಲಕ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ. ಈ ಕೆಲಸ ಮುಗಿದ ನಂತರ ಬ್ಲಾಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಮುಂದಿನ ವರ್ಷ ಸೆಪ್ಟೆಂಬರ್ 22ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಷ್ಟರಲ್ಲಿ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದು ವಿವರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮುಖಂಡರಾದ ಟಿ.ಬಿ.ಜಯಚಂದ್ರ, ಎಸ್.ಪಿ.ಮುದ್ದಹನುಮೇಗೌಡ, ಷಫಿಅಹ್ಮದ್, ರಫಿಕ್ಅಹ್ಮದ್, ಕೆ.ಷಡಕ್ಷರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT