ಶುಕ್ರವಾರ, ಜುಲೈ 30, 2021
23 °C

ಕೊರೊನಾ ಚಿಕಿತ್ಸೆ ಸಲಕರಣೆ ಖರೀದಿ ಅಕ್ರಮ: ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರಾಜ್ಯ ಸರ್ಕಾರ ಕೊರೊನಾ ಚಿಕಿತ್ಸಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಜಿಲ್ಲಾ ಸಮಿತಿ ಒತ್ತಾಯಿಸಿದೆ.

ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಪಡೆಯುವಂತೆ ಸರ್ಕಾರಕ್ಕೆ ರಾಜ್ಯಪಾಲರು ನಿರ್ದೇಶನ ನೀಡಬೇಕು ಎಂದು ಸಂಘಟನೆ ಜಿಲ್ಲಾ ಸಂಚಾಲಕ ಡಿ.ವಿ.ಲವ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಆಗ್ರಹಿಸಿದರು.

ರಾಜ್ಯವು ಕೊರೊನಾ ಸೋಂಕಿನಿಂದ ಬಹಳಷ್ಟು ತೊಂದರೆಗೆ ಒಳಗಾಗಿದೆ. ಜನರಿಗೆ ಎದುರಾಗಿರುವ ಆರ್ಥಿಕ ಸಂಕಷ್ಟದ ಪರಿಹಾರಕ್ಕೆ ಸರ್ಕಾರ ಗಮನಹರಿಸಬೇಕು. ಆದರೆ ರಾಜ್ಯ ಸರ್ಕಾರ ಕೊರೊನಾ ಚಿಕಿತ್ಸಾ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು.

ವೈದ್ಯಕೀಯ ಉಪಕರಣಗಳಾದ ವೆಂಟಿಲೇಟರ್, ಪಿಪಿಇ ಕಿಟ್, ಮುಖಗವಸು, ಕೈಗವಸು, ಆಮ್ಲಜನಕದ ಸಿಲಿಂಡರ್, ಸೋಂಕಿತರ ದಿನದ ಖರ್ಚುಗಳಲ್ಲಿ ಅಗತ್ಯಕ್ಕಿಂತ ಅಧಿಕ ಹಣವನ್ನು ಖರ್ಚು ಮಾಡಲಾಗಿದೆ. ಇವುಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಈ ಸಂಬಂಧ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕ ಚಂದ್ರಶೇಖರ್ ಗೌಡ, ‘ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಬಡವರು ಹೆಚ್ಚಿನ ಹಣ ಖರ್ಚು ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ತೋರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರ ಹಿತ ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ಅಧೀನಕ್ಕೆ ಪಡೆದು ಉಚಿತ ಚಿಕಿತ್ಸೆ ನೀಡಬೇಕು’ ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ವೇಣುಗೋಪಾಲ್, ಅನಿಲ್‍ಕುಮಾರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು