ಗುರುವಾರ , ಆಗಸ್ಟ್ 22, 2019
27 °C
ಬೆಳ್ಳಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿಕೆ

ಗ್ರಾಮಾಂತರ ಕ್ಷೇತ್ರ; ಎಲ್ಲ ಕೆರೆಗೆ ನೀರು ಹರಿಸಲು ಮುಖ್ಯಮಂತ್ರಿಗೆ ಮನವಿ

Published:
Updated:
Prajavani

ತುಮಕೂರು: 'ಎತ್ತಿನ ಹೊಳೆ ಯೋಜನೆಯಡಿ ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಎಲ್ಲ ಕೆರೆಗಳಿಗೆ ನೀರು ಹರಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ' ಎಂದು ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.

ತಾಲ್ಲೂಕಿನ ಬೆಳ್ಳಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರೈತ ಸಂಪರ್ಕ ಕೇಂದ್ರದವತಿಯಿಂದ ಆಯೋಜಿಸಿದ್ಧ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

'ವಿ.ಎಸ್.ಟಿ. ಖಾಸಗಿ ಕಂಪನಿ ಹಾಗೂ ಕೃಷಿ ಇಲಾಖೆ ವತಿಯಿಂದ ಕೃಷಿ ಯಂತ್ರೋಪಕರಣಗಳಿಗೆ ಎಸ್.ಸಿ ಮತ್ತು ಎಸ್.ಟಿ ರೈತರಿಗೆ ಶೇ 90 ರಷ್ಟು ಹಾಗೂ ಸಾಮಾನ್ಯ ವರ್ಗದವರಿಗೆ ಶೇ 50 ರಷ್ಟು ಸಹಾಯಧನ ನೀಡಲಾಗುತ್ತಿದೆ. ತುಂತುರು ನೀರಾವರಿ ಘಟಕಗಳಿಗೆ ಎಲ್ಲ ವರ್ಗದವರಿಗೂ ಶೇ 90ರಷ್ಟು ಸಹಾಯಧನ ನೀಡಲಾಗುವುದು’ ಎಂದು ತಿಳಿಸಿದರು.

'ಬೆಳ್ಳಾವಿ ಹೋಬಳಿಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಹಾಗೂ ₹ 1 ಕೋಟಿ ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹೈಟೆಕ್ ಕಾಲೇಜುಗಳನ್ನಾಗಿ ನಿರ್ಮಾಣ ಮಾಡಲು ಅನುದಾನ ಬಿಡುಗಡೆಯಾಗಿದೆ' ಎಂದು ಹೇಳಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆಂಗೇಗೌಡ, ಪಶು ಸಂಗೋಪನೆ ಇಲಾಖೆಯ ಅಧಿಕಾರಿ ಡಾ.ಸಂಜೀವ್ ರಾಯ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್.ಆದರ್ಶ್ ತಮ್ಮ ಇಲಾಖೆ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಹಾಲನೂರು ಅನಂತ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್, ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಜಗದೀಶ್, ಕಂದಾಯ ಇಲಾಖೆಯ ಅಧಿಕಾರಿಗಳಾದ ನಾಗೇಂದ್ರ, ಷರೀಬ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. 

Post Comments (+)