ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕೋವಿಡ್ ಕಾರ್ಯಪಡೆಗೆ ಒತ್ತಾಯ

Last Updated 5 ಮೇ 2021, 4:36 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರಿಗೆ ಹಾಸಿಗೆ, ಆಮ್ಲಜನಕ, ವೆಂಟಿಲೇಟರ್ ಸಮಸ್ಯೆ ಆಗದಂತೆ ಎಚ್ಚರ ವಹಿಸುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಮುರಳೀಧರ ಹಾಲಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರನ್ನು ಭೇಟಿಮಾಡಿ ಚರ್ಚಿಸಿದರು.

ಕಾಂಗ್ರೆಸ್ ವತಿಯಿಂದ ತುಮಕೂರು ನಗರದಲ್ಲಿ 50 ಹಾಸಿಗೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 25 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸಿದ್ಧರಿದ್ದು, ಅನುಮತಿ ನೀಡುವಂತೆ ಮನವಿ ಮಾಡಿದರು.

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಪಂಚಾಯಿತಿ ಪಿಡಿಒ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮೊದಲು ಧೈರ್ಯ ತುಂಬಿ ನಾಗರಿಕರಿಗೆ ಜಾಗೃತಿ ಮೂಡಿಸುವಂತೆ ಸೂಚಿಸಬೇಕು. ಪ್ರತಿ ಗ್ರಾಮದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಬೇಕು ಎಂದು ಮನವಿ ಮಾಡಿದರು.

ರೆಮ್‌ಡಿಸಿವಿರ್, ಬ್ಲಡ್ ಥಿನ್ನರ್, ಸ್ಟಿರಾಯ್ಡ್‌ಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳಬೇಕು. ರೆಮ್‌ಡಿಸಿವಿರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದರ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

ಕೋವಿಡ್ ಪರೀಕ್ಷೆ ಮಾಡಿಸಿದ ಮೂರುನಾಲ್ಕು ದಿನಗಳ ನಂತರ ವರದಿ ಬರುತ್ತಿದ್ದು, ಸರಿಯಾದ ಸಮಯದಲ್ಲಿ ಸೋಂಕಿತರಿಗೆ ಚಿಕಿತ್ಸೆ ಲಭ್ಯವಾಗದೆ ಸಾವನ್ನಪ್ಪುತ್ತಿದ್ದಾರೆ. ಕೋವಿಡ್ ವರದಿ 24 ಗಂಟೆ ಒಳಗೆ ನೀಡಲು ಕ್ರಮ ತೆಗೆದುಕೊಳ್ಳಬೇಕು. ಆರೋಗ್ಯ ಸಹಾಯವಾಣಿ ಕೇಂದ್ರದ ಮೂಲಕ ಹಾಸಿಗೆ ಲಭ್ಯವಿರುವ ಆಸ್ಪತ್ರೆಗಳ ಬಗ್ಗೆ ಸೂಕ್ತ ಮಾಹಿತಿ ಒದಗಿಸಬೇಕು. ಆಂಬುಲೆನ್ಸ್ ಸಂಖ್ಯೆ ಹೆಚ್ಚಿಸಬೇಕು, ಕೋವಿಡ್ ಖಚಿತತೆಗೆ ವೈದ್ಯರು ಸಿಟಿ ಸ್ಕ್ಯಾನಿಂಗ್‌ಗೆ ಸೂಚಿಸುತ್ತಿದ್ದು ಅದರ ದರವು ಬಡವರಿಗೆ ದುಬಾರಿಯಾಗಿದ್ದು, ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ರೈತರು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚು ಸಮಯ ನೀಡಬೇಕು, ಲಾಕ್‌ಡೌನ್‌ನಿಂದಾಗಿ ಉದ್ಯೋಗ, ವ್ಯವಹಾರ, ಆದಾಯ ಎಲ್ಲವೂ ನಷ್ಟಕ್ಕೆ ಸಿಲುಕಿದ್ದು, ಪ್ರತಿ ಕುಟುಂಬದ ಪ್ರತಿ ವ್ಯಕ್ತಿಗೆ 7 ಕೆ.ಜಿ ಅಕ್ಕಿ ನೀಡಬೇಕು. ಕೊರೊನಾ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಕುಟುಂಬಗಳಿಗೆ ವಿಮೆ ಒದಗಿಸಬೇಕು ಎಂದು ಕೋರಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ, ಹಿರಿಯ ರೇವಣಸಿದ್ಧಪ್ಪ, ಇಕ್ಬಾಲ್ ಅಹಮ್ಮದ್, ಸುಜಾತ, ನಟರಾಜು ಇದ್ದರು.

ಜವಾಬ್ದಾರಿ ಮರೆತ ಸಂಸದ: ನಂತರ ಮಾಧ್ಯಮದವರ ಜತೆ ಮಾತನಾಡಿದ ಮುರಳೀಧರ ಹಾಲಪ್ಪ, ‘ಸಂಸದ ಜಿ.ಎಸ್.ಬಸವರಾಜು ಕೋವಿಡ್ ನಿಯಂತ್ರಣಕ್ಕೆ ಗಮನ ಹರಿಸಿಲ್ಲ. ಜವಾಬ್ದಾರಿ ಅರಿತು ಕ್ರಮ ವಹಿಸಬೇಕಿತ್ತು. ಸಂಸದರಾಗಿ ಇಷ್ಟೊಂದು ನಿರ್ಲಕ್ಷ್ಯ ವಹಿಸಬಾರದು’ ಎಂದು ಆರೋಪಿಸಿದರು.

ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಮುಂಜಾಗ್ರತೆ ವಹಿಸಬೇಕಿತ್ತು. ಕಳೆದ ಒಂದೂವರೆ ವರ್ಷದಿಂದ ಸಭೆ ನಡೆಸಿಲ್ಲ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT