ಸೋಮವಾರ, ಜೂಲೈ 13, 2020
24 °C
ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಕೊರೊನಾ; ದಿನ ದಿನವೂ ವರದಿಯಾಗುತ್ತಿವೆ ಪ್ರಕರಣ

27ಕ್ಕೇರಿದ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಸೋಮವಾರ ಮತ್ತೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 27ಕ್ಕೆ ಏರಿದೆ. ತುಮಕೂರು ತಾಲ್ಲೂಕಿನ ಬೆಳ್ಳಾವಿ ಸಮೀಪದ ಮಾವಿನಕುಂಟೆ ಗ್ರಾಮದ ವ್ಯಕ್ತಿ ರಾಮನಗರ ಜಿಲ್ಲೆಯ ಮಾಗಡಿ ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಈಗ ಸೋಂಕಿಗೆ ತುತ್ತಾಗಿದ್ದಾರೆ.

ಕೆಲಸಕ್ಕೆ ಹಾಜರಾಗುವ ಮುನ್ನ ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕುಟುಂಬ ಸದಸ್ಯರು ಸೇರಿದಂತೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಇವರಿಗೆ ಸೋಂಕು ಹೇಗೆ ತಗುಲಿತು ಎನ್ನುವುದು ಪತ್ತೆಯಾಗಿಲ್ಲ. ಇದು ಜಿಲ್ಲಾ ಆರೋಗ್ಯ ಇಲಾಖೆಗೆ ಸವಾಲಾಗಿದೆ. ಮಾವಿನಕುಂಟೆಯನ್ನು ಕಂಟೈನ್‌ನ್ಮೆಂಟ್ ವಲಯ ಎಂದು ಜಿಲ್ಲಾಡಳಿತ ಘೋಷಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಈವರೆಗೆ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ ಒಂದು ವಾರದಿಂದ ಪ್ರತಿ ದಿನವೂ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಇದು ನಾಗರಿಕರಲ್ಲಿ ಆತಂಕವನ್ನು ಮೂಡಿಸಿದೆ.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಂಟೈನ್ಮ್‌ಂಟ್ ವಲಯದಲ್ಲಿರುವ ಜನರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುತ್ತಿದೆ ತಪಾಸಣೆಗೆ ಒಳಪಡುವವರ ಸಂಖ್ಯೆ: ಹೊರರಾಜ್ಯಗಳಿಂದ ಬಂದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕಿತರು, ರೋಗಲಕ್ಷಣವುಳ್ಳವರು– ಹೀಗೆ ಹಲವರ ಕಫ ಮತ್ತು ಗಂಟಲು ಸ್ರಾವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಮವಾರದ ವೇಳೆಗೆ 1,433 ಮಾದರಿಗಳ ವರದಿ ಬರಬೇಕಾಗಿತ್ತು. ಹೀಗೆ ತಪಾಸಣೆಗೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಿದಂತೆ ಜನರಲ್ಲಿಯೂ ಆತಂಕ ಮನೆಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು