ಭಾನುವಾರ, ಜೂನ್ 13, 2021
25 °C

ಸಿ.ಟಿ ಸ್ಕ್ಯಾನ್: ಆಸ್ಪತ್ರೆ ಲೈಸೆನ್ಸ್ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸಿ.ಟಿ ಸ್ಕ್ಯಾನ್ ಮಾಡಲು ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ಹಣ ಪಡೆದುಕೊಂಡಿರುವ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಮಾಡುವಂತೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಗುರುವಾರ ಸೂಚಿಸಿದರು.

ಜಿಲ್ಲಾ ಆಸ್ಪತ್ರೆಗೆ ಭೇಟಿನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ನಂತರ ಜಿಲ್ಲಾ ಪಂಚಾಯಿತಿಯಲ್ಲಿ ಕೋವಿಡ್ ನಿಯಂತ್ರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಿ.ಟಿ ಸ್ಕ್ಯಾನ್‌ಗೆ ಕೆಲವು ಕಡೆಗಳಲ್ಲಿ ₹3ರಿಂದ 4 ಸಾವಿರ ಪಡೆದುಕೊಳ್ಳಲಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ‘ದುಬಾರಿ ಶುಲ್ಕ ವಸೂಲಿ ಮಾಡಿದವರ ಮೇಲೆ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು. ನೋಟಿಸ್ ನೀಡುವುದರಿಂದ ನಿಯಂತ್ರಣ ಸಾಧ್ಯವಿಲ್ಲ. ಸರ್ಕಾರದ ನಿರ್ದೇಶನದಂತೆ ನೀಡಿರುವ ಅನುಮತಿಯನ್ನು ಏಕೆ ರದ್ದುಪಡಿಸಿಲ್ಲ ಎಂದು ಪ್ರಶ್ನಿಸಿದರು. ತಕ್ಷಣ ಕ್ರಮ ಕೈಗೊಂಡು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕು. ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಒಟ್ಟು ಹಾಸಿಗೆಗಳಲ್ಲಿ ಅರ್ಧದಷ್ಟನ್ನು ಸರ್ಕಾರಕ್ಕೆ ನೀಡಿ, ಚಿಕಿತ್ಸೆ ಕೊಡಬೇಕು. ಇಲ್ಲವಾದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಡ್ಡಾಯವಾಗಿ ಅರ್ಧದಷ್ಟು ಹಾಸಿಗೆ ಬಿಟ್ಟು ಕೊಡಲೇಬೇಕು ಎಂದು ನಿರ್ದೇಶನ ನೀಡಿದರು.

6 ಆಮ್ಲಜನಕ ಉತ್ಪಾದನೆ ಘಟಕ: ಜಿಲ್ಲಾ ಆಸ್ಪತ್ರೆ ಸೇರಿದಂತೆ 6 ತಾಲ್ಲೂಕು ಕೇಂದ್ರಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸಲು ಅನುಮತಿ ನೀಡಲಾಗಿದ್ದು, ಶೀಘ್ರ ಕೆಲಸ ಆರಂಭವಾಗಲಿದೆ. ಜಿಲ್ಲೆಗೆ ಹೆಚ್ಚುವರಿಯಾಗಿ ಬುಧವಾರ 25 ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ನೀಡಲಾಗಿದೆ. ಕೋವಿಡ್ ವರದಿ ಬಂದ 3ರಿಂದ 4 ಗಂಟೆ ಒಳಗೆ ವೈದ್ಯಕೀಯ ಕಿಟ್ ವಿತರಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಅಧಿಕ ಶುಲ್ಕ ವಸೂಲಿ: ಕೋವಿಡ್ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದರೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಡಿಎಚ್‌ಒ ಅವರನ್ನು ಪ್ರಶ್ನಿಸಿದರು. ದೂರು ಬಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕುಣಿಗಲ್ ಶಾಸಕ ಡಾ.ರಂಗನಾಥ್, ತಿಪಟೂರು ಶಾಸಕ ಬಿ.ಸಿ.ನಾಗೇಶ್ ಅವರು ಅಧಿಕ ಶುಲ್ಕ ವಸೂಲಿ ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಆಂಬುಲೆನ್ಸ್ ಕೊರತೆ: ಕೋವಿಡ್‌ನಿಂದ ಮೃತಪಟ್ಟವರನ್ನು ಸಾಗಿಸಲು ಆಂಬುಲೆನ್ಸ್ ಕೊರತೆಯಾಗಿದ್ದರೆ ಮೂರು ತಿಂಗಳಿಗೆ ತಾತ್ಕಾಲಿಕವಾಗಿ ಬಾಡಿಗೆಗೆ ತೆಗೆದುಕೊಳ್ಳಬೇಕು. ಮಹಾನಗರ ಪಾಲಿಕೆಯಲ್ಲಿ ಇರುವ ವಾಹನಗಳನ್ನು ಬಳಸಿಕೊಳ್ಳಬೇಕು ಸಚಿವರು ಸಲಹೆ ಮಾಡಿದರು.

ಮಾಸ್ಕ್ ಖರೀದಿಸಬೇಡಿ: ದಾನಿಗಳು ಸಾಕಷ್ಟು ಪ್ರಮಾಣದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್‌ಗಳನ್ನು ನೀಡುತ್ತಿದ್ದಾರೆ. ಇವುಗಳನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗುವುದು. ಹೊಸದಾಗಿ ಖರೀದಿಸಬಾರದು
ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.