ಲೋಕಸಭೆ ಚುನಾವಣಾ ಪ್ರಕ್ರಿಯೆ; ತಪ್ಪಿಸಿಕೊಂಡರೆ ಕ್ರಮ

7
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಎಚ್ಚರಿಕೆ

ಲೋಕಸಭೆ ಚುನಾವಣಾ ಪ್ರಕ್ರಿಯೆ; ತಪ್ಪಿಸಿಕೊಂಡರೆ ಕ್ರಮ

Published:
Updated:
Prajavani

ತುಮಕೂರು: ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆ ಆಗಲಿದೆ. ಇಲ್ಲದ ಸಬೂಬು ಹೇಳಿ ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

‘ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಎಲ್ಲ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ನಡೆಯುವ ಎಲ್ಲ ತರಬೇತಿಗಳು ಹಾಗೂ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗಬೇಕು’ ಎಂದು ಸೂಚನೆ ನೀಡಿದರು.

ಸೂಚಿಸಿದ ಚುನಾವಣಾ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು. ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಿದ್ಧರಾಗಬೇಕು ಎಂದರು.

ನಿಯೋಜಿತ ಎಲ್ಲ ನೋಡಲ್ ಅಧಿಕಾರಿಗಳು ತಪ್ಪದೇ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ರ್‍ಯಾಂಪ್ ವ್ಯವಸ್ಥೆ, ಕಿಟಕಿ-ಬಾಗಿಲುಗಳು ಸುಸ್ಥಿತಿ, ಶೌಚಾಲಯ, ಬೆಳಕು, ನೀರಿನ ವ್ಯವಸ್ಥೆಯಿರುವ ಬಗ್ಗೆ ಪರಿಶೀಲಿಸಿ ಅಗತ್ಯವಿರುವ ಕಡೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆಯಡಿ ಮತದಾನ ದಿನದ 48 ಗಂಟೆಗಳ ಮುನ್ನ ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಬೇಕು. ನೀತಿ ಸಂಹಿತೆ ಜಾರಿ ಅವಧಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಏರ್ಪಡಿಸುವ ಕಾರ್ಯಕ್ರಮಗಳಿಗೆ ಬಳಸಲಾಗುವ ಕರಪತ್ರ, ಪೋಸ್ಟರ್‌, ಧ್ವನಿವರ್ಧಕಗಳು, ವಿಡಿಯೊ ಚಿತ್ರೀಕರಣ, ಛಾಯಾಚಿತ್ರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಚುನಾವಣಾ ತಹಶೀಲ್ದಾರ್ ಮೋಹನ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !