ಗುರುವಾರ , ಆಗಸ್ಟ್ 22, 2019
21 °C
ತುರ್ತುಸಭೆ ನಡೆಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ಮಳೆ ಅನನುಕೂಲ; ಜಾಗ್ರತೆವಹಿಸಿ

Published:
Updated:
Prajavani

ತುಮಕೂರು: ಜಿಲ್ಲೆಯಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತುಸಭೆ ನಡೆಸಿದರು.

ಮಳೆಯಿಂದ ಉಂಟಾಗಬಹುದಾದ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ಲೋಕೋಪಯೋಗಿ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ದರಾಗಿರಬೇಕು ಎಂದರು.

ಮಳೆಯಿಂದ ರಸ್ತೆಗಳು ಹದಗೆಟ್ಟರೆ ಪರ್ಯಾಯ ಮಾರ್ಗಗಳನ್ನು ಕೂಡ ಸಾರ್ವಜನಿಕರಿಗೆ ಕಲ್ಪಿಸಿಕೊಡಬೇಕಾಗುತ್ತದೆ. ಅಂತಹ ಪರ್ಯಾಯ ಮಾರ್ಗಗಳನ್ನು ಗುರುತಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆಯಲ್ಲಿರುವ ಪರಿಕರಗಳ ಬಗ್ಗೆಯೂ ಮಾಹಿತಿ ಪಡೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಟಿ. ಭೂಬಾಲನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಕೇಂದ್ರಸ್ಥಾನ ತೊರೆಯದಿರಿ
ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲ ಅಧಿಕಾರಿಗಳು ಸಾರ್ವತ್ರಿಕ ರಜೆ ದಿನಗಳಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನ ಬಿಡಬಾರದು ಹಾಗೂ ಮೊಬೈಲ್ ಸಂಪರ್ಕಕ್ಕೆ ಲಭ್ಯವಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

Post Comments (+)