ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪಗೆ ಡಿಸಿಎಂ ಸ್ಥಾನ: ಕುರುಬ ಸಮುದಾಯದ ಮುಖಂಡರ ಮನವಿ

Last Updated 31 ಜುಲೈ 2021, 8:12 IST
ಅಕ್ಷರ ಗಾತ್ರ

ತುಮಕೂರು: ಹಿಂದುಳಿದ ವರ್ಗಗಳ ನಾಯಕರಾಗಿರುವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕುರುಬ ಸಮುದಾಯದ ಮುಖಂಡರು ಒತ್ತಾಯಿಸಿದರು.

ಜಾತಿ ಆಧಾರದ ಮೇಲೆ ರಾಜಕಾರಣ ನಡೆಯುತ್ತಿದೆ. ಜಾತಿ ಇಲ್ಲದೆ ರಾಜಕೀಯ ಮಾಡಲು ಸಾಧ್ಯವಿಲ್ಲ. ಈಗ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ. ನಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಬಿಜೆಪಿ ಮುಖಂಡರಿಗೆ ಸಲ್ಲಿಸಲಾಗುವುದು ಎಂದು ರಾಜ್ಯ ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ ಜತೆ ಈಶ್ವರಪ್ಪ ಸಹ ರಾಜ್ಯದಲ್ಲಿ ಸುತ್ತಾಡಿ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಅವರಂತೆ ಮುಖ್ಯಮಂತ್ರಿ ಮಾಡಬೇಕಿತ್ತು. ಆದರೆ ಈಗ ಉಳಿದಿರುವ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್, ‘ರಾಜ್ಯದ ದೊಡ್ಡ ಸಮುದಾಯದ ನಾಯಕರಾಗಿದ್ದು, ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದಾರೆ. ಹಿಂದುಳಿದ ವರ್ಗದ ನಾಯಕನಿಗೆ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಕೊಟ್ಟಿಲ್ಲ. ಕನಿಷ್ಠ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದರು.

ಹಾಲುಮತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಗರುಡಯ್ಯ, ‘ಯಡಿಯೂರಪ್ಪ ಜತೆ ಜೋಡೆತ್ತಿನಂತೆ ಪಕ್ಷ ಕಟ್ಟಿದ್ದಾರೆ. ಅವರ ಶ್ರಮ ಗುರುತಿಸಿ ಅವಕಾಶ ಮಾಡಿಕೊಡಬೇಕು’ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಓಂನಮೋ ನಾರಾಯಣ, ‘ಕುರುಬ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಈಶ್ವರಪ್ಪ ಅವರಿಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ತಪ್ಪಿದೆ’ ಎಂದರು.

ರೇವಣಸಿದ್ದೇಶ್ವರ ಮಠದ ಬಿಂದುಶೇಖರ್ ಒಡೆಯರ್, ‘ಹಿಂದುಳಿದ ವರ್ಗಗಳ ನಾಯಕನಿಗೆ ಮನ್ನಣೆ ನೀಡುವ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು’ ಎಂದು ಒತ್ತಾಯಿಸಿದರು.

ಕುರುಬರ ಸಂಘದ ಕಾರ್ಯಾಧ್ಯಕ್ಷ ಆರ್‌ಎಂಸಿ ರಾಜು, ಉಪಾಧ್ಯಕ್ಷ ಕುಮಾರಸ್ವಾಮಿ, ಪಾಲಿಕೆ ಸದಸ್ಯ ಲಕ್ಷ್ಮಿನರಸಿಂಹ ರಾಜು, ಇಂದ್ರಕುಮಾರ್, ನಾಗಭೂಷಣ್, ಪ್ರದೇಶ ಕುರುಬರ ಸಂಘದ ನಿರ್ದೇಶಕ ಎಸ್.ಶಂಕರ್, ಕಾಳಿದಾಸ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಭೀಮರಾಜು, ಮುಖಂಡರಾದ ಟಿ.ಇ.ರಘುರಾಂ, ಗೂಳೂರು ಕೃಷ್ಣಮೂರ್ತಿ, ಯೋಗೀಶ್, ಆದಿನಾರಾಯಣ್, ರಮೇಶ್, ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT