ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ರಂದು ಕರ್ನಾಟಕ ಬಂದ್‌ಗೆ ನಿರ್ಧಾರ

ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಧೋರಣೆಗೆ ರೈತ ಸಂಘ ಅಸಮಾಧಾನ
Last Updated 14 ಸೆಪ್ಟೆಂಬರ್ 2021, 7:04 IST
ಅಕ್ಷರ ಗಾತ್ರ

ಗುಬ್ಬಿ: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ರೈತ ಸಂಘಟನೆಗಳ ಬಗ್ಗೆ ನಿರ್ಲಕ್ಷ್ಯವಹಿಸುತ್ತಿರುವುದು ಸರಿಯಲ್ಲ. ಈ ಹಿಂದೆ ಅವರೇ ನಮ್ಮ ಜೊತೆ ಹೋರಾಟ ಮಾಡುತ್ತಿದ್ದರು. ಈಗ ನಮ್ಮ ಮೇಲೆ ವಿಶ್ವಾಸವಿಟ್ಟು ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ. ಅವರ ಮನಸ್ಥಿತಿ ಇದೇ ರೀತಿ ಮುಂದುವರಿದರೆ ರೈತರು ಏನೆಂಬುದನ್ನು ಅವರಿಗೆ ತಿಳಿಸುತ್ತೇವೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೋವಿಂದರಾಜು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರೈತರು ದೆಹಲಿಯಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಪರವಾಗಿ ತೀರ್ಮಾನ ಕೈಗೊಂಡಿಲ್ಲ. ಇದನ್ನು ವಿರೋಧಿಸಿ ಇದೇ 27ರಂದು ಕರ್ನಾಟಕ ಬಂದ್ ಮಾಡಲು ರೈತ ಸಂಘ ಸೇರಿದಂತೆ ರಾಜ್ಯದ 41 ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ ಎಂದು ತಿಳಿಸಿದರು.

ರೈತ ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಅದೇ ರೀತಿ ರಾಜ್ಯದಲ್ಲಿಯೂ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಬಂದ್ ಆಚರಿಸುತ್ತಿದ್ದೇವೆ. ವಿದ್ಯಾರ್ಥಿಗಳು, ವರ್ತಕರು, ಅಂಗಡಿ ಮಾಲೀಕರು, ಕೃಷಿಕರು ಸೇರಿದಂತೆ ಎಲ್ಲಾ ವರ್ಗದ ಜನರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ಬೃಹತ್‌ ಮಟ್ಟದಲ್ಲಿ ಬಂದ್ ಆಚರಿಸಲು ನಿರ್ಧರಿಸಲಾಗಿದೆ. ಎಲ್ಲಾ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಒಟ್ಟಾಗಿ ಈ ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸಬೇಕು. ಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕೆಸರೆರಚಾಟ ಬಿಟ್ಟು ಅಲ್ಲಿಗೆ ನೀರು ಹರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ತಾಲ್ಲೂಕು ರೈತ ಸಂಘದ ಅಧ್ಯಕ್ಷ ವೆಂಕಟೆಗೌಡ, ಪ್ರಾಂತ ರೈತ ಸಂಘದ ಅಜ್ಜಪ್ಪ, ರೈತ ಸಂಘದ ಪದಾಧಿಕಾರಿಳಾದ ಗುರುಚನ್ನಬಸಪ್ಪ, ಕಾಳೇಗೌಡ, ಕೃಷ್ಣ, ನಿಂಗರಾಜು, ಅಸ್ಲಾಂ ಪಾಷಾ, ಯತೀಶ್, ಜಗದೀಶ್, ಕುಮಾರ್ ಸ್ವಾಮಿ, ಬಸವರಾಜು, ಮಂಜುನಾಥ, ರವೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT