ಸೋಮವಾರ, ಸೆಪ್ಟೆಂಬರ್ 20, 2021
21 °C
ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಾಸಕರ ಸೂಚನೆ

ಶಾಲೆಗೆ ವಿಳಂಬ: ಶಿಕ್ಷಕರ ವಿರುದ್ಧ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ಕೆಲಸ ಮಾಡಲು ಆಗದಿದ್ದರೆ ವರ್ಗಾವಣೆ ಮಾಡಿಸಿಕೊಂಡು ಹೋಗಿ ಎಂದು ಶಾಸಕ ವೆಂಕಟರಮಣಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳಿಗೆ ಸಮರ್ಪಕವಾಗಿ ಕೆಲಸ ಮಾಡುವಂತೆ ಅವರು ಸೂಚಿಸಿದರು.

ತಾಲ್ಲೂಕಿನ ಶಾಲೆಗಳಿಗೆ ಆಂಧ್ರ, ಜಿಲ್ಲಾ ಕೇಂದ್ರ ಇತರೆ ದೂರದೂರುಗಳಿಂದ ನಿತ್ಯ ಶಿಕ್ಷಕರು ಓಡಾಡುತ್ತಿದ್ದಾರೆ. ಇದರಿಂದ ಶಾಲೆಗಳಿಗೆ ಸಕಾಲಕ್ಕೆ ಹೋಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಹೀಗಾದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ. ಕೂಡಲೇ ತಡವಾಗಿ ಶಾಲೆಗೆ ಬರಯವ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವತ್ಧನಾರಾಯಣ ಅವರಿಗೆ ಸೂಚಿಸಿದರು.

ತಾಲ್ಲೂಕಿನಾದ್ಯಂತ ಅಂತರ್ಜಲ ಮಟ್ಟ ಕುಸಿದಿದೆ. ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ಇಲಾಖೆಯಿಂದ ನೂತನ ಕೆರೆಗಳ ನಿರ್ಮಾಣ, ಸಂರಕ್ಷಣಾ ಕೆಲಸ ಸರಿಯಾಗಿ ನಡೆಯುತ್ತಿಲ್ಲ. ನರೇಗಾ ಯೋಜನೆಯಲ್ಲಿ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಂದು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಕೈಗೊಂಡಿರುವ ಕಾಮಗಾರಿ, ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡುವುದು ವಿಳಂಬವಾಗುತ್ತಿದೆ. ಕೂಡಲೇ ವಿದ್ಯುತ್ ಸಂಪರ್ಕ ನೀಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತೀಕ್, ಕೃಷ್ಣಪ್ಪ, ಕಾರ್ಯ ನಿರ್ವಹಣಾಧಿಕಾರಿ ಶಿವರಾಜಯ್ಯ, ಇನ್‌ಸ್ಪೆಕ್ಟರ್ ಲಕ್ಷ್ಮಿಕಾಂತ್, ರಂಗನಾಥ್, ಮಲ್ಲಕಾರ್ಜುನ್, ವಿಜಯಮೂರ್ತಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.