ಭಾನುವಾರ, ಆಗಸ್ಟ್ 1, 2021
21 °C

ಪರಿಷತ್‌ಗೆ ಸದಾಶಿವಯ್ಯ ನೇಮಕಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವಿಧಾನ ಪರಿಷತ್‌ಗೆ ಬಿಜೆಪಿ ಹಿರಿಯ ಮುಖಂಡ ಪಿ.ಸದಾಶಿವಯ್ಯ ಅವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜನ ಸಂಗ್ರಾಮ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಪಂಡಿತ್ ಜವಹಾರ್ ಒತ್ತಾಯಿಸಿದ್ದಾರೆ.

ಬಿಜೆಪಿಯ ಇಬ್ಬರು ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕಲ್ಪಿಸಿಕೊಟ್ಟಿರುವುದು ಒಳ್ಳೆಯ ಬೆಳವಣಿಗೆ. ಅದೇ ರೀತಿ ವಿಧಾನ ಪರಿಷತ್‌ಗೆ ಸದಸ್ಯರನ್ನು ನಾಮಕರಣ ಮಾಡುವ ಸಮಯದಲ್ಲೂ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸಬೇಕು. ಪಕ್ಷಕ್ಕಾಗಿ ಸದಾ ದುಡಿಯುತ್ತಿರುವ ಸದಾಶಿವಯ್ಯ ಅವರಿಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜನಪರ ಹೋರಾಟಗಳಲ್ಲಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. 1975ರಲ್ಲಿ ತುರ್ತು ಪರಿಸ್ಥಿತಿಯ ಸಮಯದಲ್ಲೂ ಹೋರಾಟ ನಡೆಸಿದ್ದಾರೆ. ಜಿಲ್ಲೆಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಹತ್ತು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದಾರೆ. ಲೋಕಸಭೆ ಮಾಜಿ ಉಪಸಭಾಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿಯೂ ದುಡಿದಿದ್ದಾರೆ.

ಜಿಲ್ಲಾ ಗ್ರಾಹಕ ಸಂರಕ್ಷಣಾ ಪರಿಷತ್ ಸದಸ್ಯರಾಗಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಗ್ರಾಹಕರ ಹಕ್ಕುಗಳು, ಕರ್ತವ್ಯಗಳು, ಮಾಹಿತಿ ಹಕ್ಕು, ಗ್ರಾಹಕರ ವಿವಾದಗಳ ಪರಿಹಾರಕ್ಕೆ ಸಂಬಂಧಿಸಿದ ಸಲಹೆಗಳನ್ನು ನಿರಂತರವಾಗಿ ಜನರಿಗೆ ನೀಡುತ್ತಾ ಬಂದಿದ್ದಾರೆ. ಇಂತಹವರನ್ನು ಪರಿಷತ್‌ಗೆ ನೇಮಕ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.