ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈರಲ್ ಜ್ವರ ಹೆಚ್ಚಳ: ಡೆಂಗಿ ಚಿಕಿತ್ಸೆಗೆ ಪ್ರತ್ಯೇಕ ಕೇಂದ್ರ

ಡೆಂಗಿ 354, 70 ಚಿಕುನ್‍ಗುನ್ಯ ಪ್ರಕರಣ
Published 27 ಅಕ್ಟೋಬರ್ 2023, 15:40 IST
Last Updated 27 ಅಕ್ಟೋಬರ್ 2023, 15:40 IST
ಅಕ್ಷರ ಗಾತ್ರ

ತುಮಕೂರು: ಡೆಂಗಿ ರೋಗಿಗಳ ರಕ್ತ ಪರೀಕ್ಷೆಗೆ ಟ್ರಾಮಾಕೇರ್ ಸೆಂಟರ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕ ಕೇಂದ್ರ ತೆರೆಯಲು ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಇಲ್ಲಿ ಗುರುವಾರ ತಿಳಿಸಿದರು.

ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ 240, ಖಾಸಗಿ ಆಸ್ಪತ್ರೆಯಲ್ಲಿ 114 ಸೇರಿ ಒಟ್ಟು 354 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 70 ಚಿಕುನ್‍ಗುನ್ಯ ಪ್ರಕರಣಗಳು ವರದಿಯಾಗಿವೆ. ಅಲ್ಲದೆ ವೈರಲ್ ಜ್ವರ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಸಾರ್ವಜನಿಕರು ನಿರ್ಲಕ್ಷ್ಯ ತೋರದೆ ಜ್ವರದ ಲಕ್ಷಣಗಳು ಕಂಡು ಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ವಿವಿಧ ಹುದ್ದೆಗಳ ನೇಮಕಾತಿಗಾಗಿ ಎರಡು ದಿನ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಅ. 28ರಂದು ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ, ಅ. 29ರಂದು ನಗರದ 16, ಗುಬ್ಬಿಯ 1, ಕುಣಿಗಲ್, ಕೊರಟಗೆರೆಯಲ್ಲಿ ತಲಾ 2, ಮಧುಗಿರಿಯಲ್ಲಿ 3, ಶಿರಾದಲ್ಲಿ 4 ಸೇರಿ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲ ದಿನ 11,917, ಎರಡನೇ ದಿನ 26,267 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಅ. 27ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು ಅ. 27ರಿಂದ ಡಿ. 9ರ ವರೆಗೆ ಅವಕಾಶ ಕಲ್ಪಿಸಲಾಗುವುದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗಾಗಿ ನ.18 ಮತ್ತು 19, ಡಿ.2 ಮತ್ತು 3ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು. 2024ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕರಡು ಮತದಾರರ ಪಟ್ಟಿ ಅನ್ವಯ 11,23,062 ಪುರುಷರು, 11,32,016 ಮಹಿಳೆಯರು ಹಾಗೂ 104 ಇತರೆ ಸೇರಿದಂತೆ ಒಟ್ಟು 22,55,182 ಅರ್ಹ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT