ತುಮಕೂರು: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ, ಅಂಗನವಾಡಿ ಕೊಠಡಿ, ಶೌಚಾಲಯ ಕಟ್ಟಡಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಮಕ್ಕಳು ಕುಳಿತುಕೊಳ್ಳಲು ಯೋಗ್ಯವಿಲ್ಲದ, ದುಸ್ಥಿತಿಯಲ್ಲಿರುವ ಕೊಠಡಿಗಳನ್ನು ನೆಲಸಮ ಮಾಡಬೇಕು. ಇದಕ್ಕೆ ಜಿ.ಪಂನಿಂದ ಅನುಮೋದನೆ ಪಡೆದುಕೊಳ್ಳಬೇಕು. ಮಕ್ಕಳಿಗೆ ಪಾಠ ಮಾಡುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದುಃಸ್ಥಿತಿಯಲ್ಲಿರುವ ಕೊಠಡಿಗಳ ನೆಲಸಮ ಮಾಡಲಾಗುತ್ತಿದೆ ಎಂದು ಹೇಳಿದರು.
ಮಳೆಗಾಲ ಆರಂಭವಾಗಿದ್ದು, ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ದುರಸ್ತಿಪಡಿಸಲಾಗದ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೆಲಸಮ ಮಾಡುವ ಕಾರ್ಯವನ್ನು ವಿಳಂಬ ಮಾಡದೆ ಸೆಪ್ಟೆಂಬರ್ ಒಳಗಾಗಿ ಪೂರ್ಣಗೊಳಿಸಬೇಕು. ತ್ಯಾಜ್ಯವನ್ನು ಶಾಲಾ ಆವರಣದಿಂದ ತೆರವುಗೊಳಿಸಬೇಕು. ಶಿಥಿಲ ಕೊಠಡಿಗಳ ಸ್ಥಿತಿ-ಗತಿಯ ಛಾಯಾಚಿತ್ರ, ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶಿಸಿದರು.
ಶಿಕ್ಷಕರಿಗೆ ತರಬೇತಿ: ಜಿಲ್ಲೆಯಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಶಿಕ್ಷಕರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಪಠ್ಯ ಬೋಧನಾ ಕ್ರಮ, ಮಕ್ಕಳ ಕಲಿಕೆಗೆ ಉತ್ತೇಜನ, ವಿದ್ಯಾರ್ಥಿಗಳಲ್ಲಿ ಕೌಶಲ, ಸೃಜನಶೀಲತೆ ಹೆಚ್ಚಿಸಲು ಅಳವಡಿಸಿಕೊಳ್ಳಬೇಕಾದ ವಿಧಾನಗಳ ಬಗ್ಗೆ ಶಿಕ್ಷಕರಿಗೆ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು. ಫಲಿತಾಂಶ ಕುಸಿದಿರುವ ಅನುದಾನಿತ ಶಾಲೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಾವಗಡ ತಾಲ್ಲೂಕಿನಲ್ಲಿ ಕೆಲವು ಶಿಕ್ಷಕರು ಶಾಲೆಗಳಿಗೆ ಮದ್ಯ ಸೇರಿಸಿ ಬಂದು ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೋಷಕರಿಂದ ದೂರುಗಳು ಬಂದಿವೆ. ಶಿಕ್ಷಕರು ಮಕ್ಕಳಿಗೆ ಮಾದರಿಯಾಗಿರಬೇಕು. ಶಾಲೆಗೆ ಗೌರವಯುತವಾಗಿ ಬರಬೇಕು. ಅಶಿಸ್ತು ತೋರುವ ಶಿಕ್ಷಕರ ಪಟ್ಟಿ ಸಿದ್ಧಪಡಿಸಿ ತಮಗೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.
ವಿವೇಕ ಯೋಜನೆಯಡಿ ಮಂಜೂರಾಗಿರುವ 360 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಮುಂದಿನ ಜನವರಿ ಒಳಗೆ ಪೂರ್ಣಗೊಳಿಸಬೇಕು ಎಂದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆ ಡಿಡಿಪಿಐ ಗಂಗಾಧರ್, ಜಿ.ಪಂ ಉಪಕಾರ್ಯದರ್ಶಿ ಹಾಲಸಿದ್ಧಪ್ಪ ಪೂಜೇರಿ, ಸಣ್ಣ ಮಸಿಯಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ತಿಮ್ಮರಾಯಪ್ಪ ಇತರರು ಉಪಸ್ಥಿತರಿದ್ದರು.
ವಿವೇಕ ಯೋಜನೆಯಡಿ ಜಿಲ್ಲೆಯಲ್ಲಿ ₹54.62 ಕೋಟಿ ವೆಚ್ಚದಲ್ಲಿ 479 ಹೊಸ ಕೊಠಡಿ ನಿರ್ಮಿಸಲಾಗುತ್ತಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 953 ಕೊಠಡಿಗಳ ದುರಸ್ತಿಗೆ ₹19.06 ಕೋಟಿ ವೆಚ್ಚದ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನ್‌ಮೋಹನ್ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 1161 ಶಾಲೆಗಳಲ್ಲಿ ಆವರಣ ಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 874 ಶೌಚಾಲಯ 945 ಆಟದ ಮೈದಾನಗಳ ಅಗತ್ಯವಿದೆ. ಶಿಥಿಲಾವಸ್ಥೆಯಲ್ಲಿರುವ 1087 ಕೊಠಡಿಗಳನ್ನು ನೆಲಸಮಗೊಳಿಸಲು ಗುರುತಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 2657 ಪ್ರಾಥಮಿಕ 196 ಪ್ರೌಢಶಾಲೆಗಳ ಆಸ್ತಿ ನೋಂದಣಿಯಾಗಿದೆ. 582 ಪ್ರಾಥಮಿಕ 31 ಪ್ರೌಢಶಾಲೆ ಆಸ್ತಿ ನೋಂದಣಿ ಮಾಡಬೇಕಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.