ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಣ ನೀತಿ ಜಾರಿಗೂ ಮುನ್ನ ಚರ್ಚಿಸಿ’

ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಜಿ.ತಿಮ್ಮೇಗೌಡ ಒತ್ತಾಯ
Last Updated 18 ಅಕ್ಟೋಬರ್ 2020, 5:56 IST
ಅಕ್ಷರ ಗಾತ್ರ

ತುಮಕೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಿದ ಬಳಿಕ ಜಾರಿಗೊಳಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಜಿ.ತಿಮ್ಮೇಗೌಡ ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಾರ್ಯಕಾರಿ ಮಂಡಳಿ ಸಭೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ಸೇವೆ ಬಗ್ಗೆ ಪುನರ್ ಪರಿಶೀಲಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘1.68 ಲಕ್ಷ ಶಿಕ್ಷಕರನ್ನು ಸಂಘ ಪ್ರತಿನಿಧಿಸುತ್ತಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಾಕಷ್ಟು ಸಮಸ್ಯೆಗಳನ್ನು ಸಂಘವು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಿದೆ. ಕೊರೊನಾ ಸೋಂಕಿನಿಂದ ಇಡೀ ದೇಶವೇ ತತ್ತರಿಸಿದ್ದು, ಇಂತಹ ಅನಿವಾರ್ಯ ಪರಿಸ್ಥಿತಿಯಲ್ಲಿ ಆಗ್ನೇಯ ಪದವೀಧರರ ಚುನಾವಣೆ ನಡೆಯುತ್ತಿದೆ’ ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ, ‘ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಶಿಕ್ಷಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕೊರೊನಾ ವಾರಿಯರ್ಸ್ ಆಗಿ ವಿದ್ಯಾಗಮ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ’ ಎಂದು ತಿಳಿಸಿದರು.

ಶಿಕ್ಷಕರಿಗೆ ಆರಂಭಿಕ ₹13,600 ಇದ್ದ ಸಂಬಳವನ್ನು ವೇತನ ಆಯೋಗದಲ್ಲಿ ₹25,800– ₹51,400ರ ವರೆಗೆ ಹೆಚ್ಚಿಸಲಾಗಿದೆ. ₹450 ವಿಶೇಷ ವೇತನವನ್ನು ಶಿಕ್ಷಕರ ಮೂಲ ವೇತನದಲ್ಲಿ ವಿಲೀನಗೊಳಿಸಲಾಗಿದೆ. ಸಂಘದ ಹೋರಾಟದಿಂದ ವೇತನದಲ್ಲಿ ಹೆಚ್ಚಳವಾಗಿದೆ. ಸಿಆರ್‌ಪಿ, ಬಿಆರ್‌ಪಿಗಳಿಗೆ ಮೆರಿಟ್ ಆಧಾರದ ಮೇಲೆ ಕೌನ್ಸೆಲಿಂಗ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಹಿಂಬಾಕಿ ವೇತನಕ್ಕಾಗಿ ₹293 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿವರಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಷಣ್ಮುಖಪ್ಪ ಮಾತನಾಡಿ, ‘ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸಂಘವು ಸ್ಪಂದಿಸಿ ಕೆಲಸ ಮಾಡಿದೆ’ ಎಂದರು.

ಸಂಘದ ರಾಜ್ಯ ಸಹಕಾರ್ಯದರ್ಶಿ ಯುವರಾಜ್, ಗೌರವಾಧ್ಯಕ್ಷ ನಾಗರಾಜ್, ತುಮಕೂರು ತಾಲ್ಲೂಕು ಘಟಕದ ಅಧ್ಯಕ್ಷ ಪರಮೇಶ್, ಪ್ರಧಾನ ಕಾರ್ಯದರ್ಶಿ ನಾಗರಾಜು ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT