ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಸು ಕಟ್ಟಿ, ಹಾಲು ಕರೆದು ಪ್ರತಿಭಟನೆ

ಬಿಜೆಪಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ
Published 30 ಜೂನ್ 2024, 6:04 IST
Last Updated 30 ಜೂನ್ 2024, 6:04 IST
ಅಕ್ಷರ ಗಾತ್ರ

ತುಮಕೂರು: ಹಾಲಿನ ಪ್ರೋತ್ಸಾಹಧನ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಯಿತು.

ರೈತ ಮೋರ್ಚಾ ನೇತೃತ್ವದಲ್ಲಿ ಹಸು ಕರೆತಂದು ಹಾಲು ಕರೆದು ಜಿಲ್ಲಾಧಿಕಾರಿಗೆ ಹಾಲು ನೀಡಿ ಪ್ರತಿಭಟಿಸಿದರು. ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ ₹900 ಕೋಟಿ ಪ್ರೋತ್ಸಾಹಧನ ಬಿಡುಗಡೆಗೆ ಆಗ್ರಹಿಸಿದರು. ಸರ್ಕಾರ, ಸಚಿವರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಗೆ ರಾಸುಗಳನ್ನು ಬಳಸಿಕೊಳ್ಳುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್‌.ರವಿಶಂಕರ್‌, ‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳನ್ನು ಈ ಸರ್ಕಾರ ಸ್ಥಗಿತಗೊಳಿಸಿದೆ. ಚುನಾವಣೆ ಸಂದರ್ಭದಲ್ಲಿ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ ಸರ್ಕಾರಕ್ಕೆ ಹಾಲಿನ ಪ್ರೋತ್ಸಾಹ ಧನ ನೀಡಲು ಹಣ ಇರಲಿಲ್ಲವೇ?’ ಎಂದು ಪ್ರಶ್ನಿಸಿದರು.

ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ‘ರಾಜ್ಯ ಸರ್ಕಾರ ರೈತರಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೀಡುತ್ತಿದ್ದ ₹4 ಸಾವಿರ ನಿಲ್ಲಿಸಿದೆ. ಗ್ರಾಹಕರಿಗೆ ಹಾಲಿನ ದರ ಹೆಚ್ಚಳ ಮಾಡಿದೆ. ಹಾಲು ಉತ್ಪಾದಕರಿಗೆ ಲೀಟರ್ ಹಾಲಿಗೆ ₹1.40 ಕಡಿಮೆ ಮಾಡಿದೆ. ಬಿತ್ತನೆ ಬೀಜದ ಬೆಲೆಯನ್ನು ಹೆಚ್ಚಾಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಎಸ್.ಶಿವಪ್ರಸಾಸ್‌, ‘ರಾಜ್ಯದಲ್ಲಿ ಕಿವಿ, ಮೂಗು, ಕಣ್ಣು ಇಲ್ಲದ ನಿರ್ಲಜ್ಜ ಸರ್ಕಾರವಿದೆ. ಸರ್ಕಾರಕ್ಕೆ ಜನರ ಸಂಕಷ್ಟ ಬೇಕಾಗಿಲ್ಲ. ರೈತ ಪರ ಯೋಜನೆಗಳಿಗೆ ಕತ್ತರಿ ಹಾಕಿ ಗದಾಪ್ರಹಾರ ಮಾಡುತ್ತಿದೆ. ಬೆಲೆ ಏರಿಕೆ ಮಾಡಿ, ಸಾರ್ವಜನಿಕರ ಹಣ ಕೊಳ್ಳೆ ಹೊಡೆಯುವುದೇ ಕಾಯಕವಾಗಿದೆ’ ಎಂದು ಕಿಡಿಕಾರಿದರು.

ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಜಿ.ಅರಿವೇಸಂದ್ರ ಸಿದ್ದರಾಮಯ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಮುಖಂಡರಾದ ಸತ್ಯಮಂಗಲ ಜಗದೀಶ್, ಗಂಗರಾಜು, ಸಂದೀಪ್‍ಗೌಡ, ಹಾಲೇಗೌಡ, ಎಚ್.ಎಂ.ರವೀಶಯ್ಯ, ಜ್ಯೋತಿ ತಿಪ್ಪೇಸ್ವಾಮಿ, ಡಾ.ಪರಮೇಶ್, ಟಿ.ಎಚ್.ಹನುಮಂತರಾಜು, ಕೆ.ವೇದಮೂರ್ತಿ, ಯು.ಆರ್.ವೆಂಕಟೇಶ್, ಬಂಬೂ ಮೋಹನ್, ನವಚೇತನ್, ಟಿ.ಆರ್.ಸದಾಶಿವಯ್ಯ, ತಿಮ್ಮಣ್ಣ, ವೆಂಕಟೇಗೌಡ, ನಾಗರಾಜು, ತಿರುಮಲೇಶ್‌ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT