ಭಾನುವಾರ, ಫೆಬ್ರವರಿ 28, 2021
23 °C

ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಪದವೀಧರರು ನೋಂದಣಿ ಮಾಡಿಕೊಳ್ಳಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಸಂಬಂಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಭೆಯಲ್ಲಿ ಅವರ ಮಾತನಾಡಿದರು. 

ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪದವೀಧರರು ಸಹ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕು. ಹಳೆಯ ಮತದಾರರ ಪಟ್ಟಿ ಪರಿಗಣಿಸಲಾಗುವುದಿಲ್ಲ. ಪದವಿ ಮುಗಿಸಿ 3 ವರ್ಷ ಪೂರೈಸಿರುವವರು ನ.6ರವರೆಗೆ ನಮೂನೆ 18ರಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಹಶೀಲ್ದಾರ್ ಕಚೇರಿ, ತಾಲ್ಲೂಕು ಕಚೇರಿ ಹಾಗೂ ಮಹಾನಗರ ಪಾಲಿಕೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದರು.

ಆಗ್ನೇಯ ಪದವೀಧರ ಕ್ಷೇತ್ರ ವ್ಯಾಪ್ತಿಯು ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ಹೊರತುಪಡಿಸಿ) ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದಂತೆ ನ.23ರಂದು ಕರಡು ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗುವುದು. ನ.23ರಿಂದ ಡಿ.9ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇದೆ. ಡಿ.30ರಂದು ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗುವುದು. ಆದ್ದರಿಂದ ರಾಜಕೀಯ ಪಕ್ಷಗಳವರು ಅರ್ಹ ಪದವೀಧರ ಮತದಾರರಲ್ಲಿ ಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಸಹಕರಿಸಬೇಕು ಎಂದರು.

ಸಾರ್ವತ್ರಿಕ ಚುನಾವಣೆಯ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಅ.15ರವರೆಗೆ ಮತದಾರರ ಪಟ್ಟಿಯಲ್ಲಿ ತಮ್ಮ ಮಾಹಿತಿ ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿದೆ. 15ರಂದು ಕರಡು ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗುವುದು. ನ.30ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇದೆ. 2020ರ ಜನವರಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.