ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇವಿಎಂ ಹ್ಯಾಕ್ ಮಾಡಿ ಕಾಂಗ್ರೆಸ್ 136 ಸ್ಥಾನ ಗೆದ್ದಿತೇ?: ಕುಮಾರಸ್ವಾಮಿ ಪ್ರಶ್ನೆ

Published 17 ಜೂನ್ 2024, 13:01 IST
Last Updated 17 ಜೂನ್ 2024, 13:01 IST
ಅಕ್ಷರ ಗಾತ್ರ

ತುಮಕೂರು: ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್‌ಮಾಡಿ ರಾಜ್ಯದಲ್ಲಿ ಕಾಂಗ್ರೆಸ್‌ನವರು 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆಯೇ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳುತ್ತಿರುವವರು ಮೊದಲು ಸಾಕ್ಷಿ ಕೊಡಲಿ. ಆ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ’ ಎಂದರು.

ಈ ಬಗ್ಗೆ ಹಲವು ವರ್ಷಗಳಿಂದ ಆರೋಪ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಯಾರೂ ಖಚಿತಪಡಿಸಲು ಸಾಧ್ಯವಾಗಿಲ್ಲ. ಇದೆಲ್ಲ ಊಹಾಪೋಹವೆಂದು ಚುನಾವಣಾ ಆಯೋಗವೂ ಹೇಳಿದೆ. ಸುಪ್ರೀಂ ಕೋರ್ಟ್‌ನಲ್ಲೂ ಚರ್ಚೆಗಳು ನಡೆದಿವೆ ಎಂದು ಹೇಳಿದರು.

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಕೂಗು ಇದೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ಮೂಡಿಸಿ ಸ್ಥಳೀಯರಿಗೆ ಉದ್ಯೋಗ ಕೊಡಿಸಲು ಪ್ರಯತ್ನಿಸಲಾಗುವುದು. ರಾಜ್ಯಕ್ಕೆ ಯಾವೆಲ್ಲ ಕೈಗಾರಿಕೆ ತರಬಹುದು ಎಂಬ ಬಗ್ಗೆ ಗಮನ ಹರಿಸಲಾಗಿದೆ ಎಂದರು.

ವಿದ್ಯುತ್ ದರ ಏರಿಸಿಲ್ಲ: ಜೆಡಿಎಸ್ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ನಾನು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಹಾಗಿದ್ದರೆ ದಾಖಲೆ ಕೊಡಲಿ. ಸುಳ್ಳು ಹೇಳಲು ಒಂದು ಮಿತಿ ಇರಬೇಕು’ ಎಂದು ಕಿಡಿಕಾರಿದರು.

‘ರೈತರ ಸಾಲ ಮನ್ನಾ ಮಾಡಿದ ಸಮಯದಲ್ಲಿ ₹25 ಸಾವಿರ ಕೋಟಿ ಹೊಂದಿಸಲು ತೈಲ ದರ ಹೆಚ್ಚಿಸಲು ಪ್ರಯತ್ನಿಸಿದ್ದೆ. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ. ಈಗ ನೋಡಿದರೆ ಬೆಲೆ ಹೆಚ್ಚು ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ’ ಎಂದರು.

ಗೊಲ್ಲ, ಕುಂಚಿಟಿಗರಿಗೆ ಮೀಸಲು: ಭರವಸೆ

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಮೀಸಲಾತಿಗೆ ಸೇರಿಸುವಂತೆ ಸಾಕಷ್ಟು ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಮೀಸಲಾತಿ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಜೆಡಿಎಸ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ಕುಂಚಿಟಿಗ ಒಕ್ಕಲಿಗರು ಕೇಂದ್ರದ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಸಾಕಷ್ಟು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟು ಮೀಸಲಾತಿ ಕಲ್ಪಿಸಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT