ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಶಾಸಕರಿದ್ದರೂ ಶಿರಾ, ಪಾವಗಡ ವಿಧಾನಸಭಾ ಕ್ಷೇತ್ರಗಳಲ್ಲಿ BJPಗೆ ಮುನ್ನಡೆ

Published 4 ಜೂನ್ 2024, 14:17 IST
Last Updated 4 ಜೂನ್ 2024, 14:17 IST
ಅಕ್ಷರ ಗಾತ್ರ

ಶಿರಾ/ ಪಾವಗಡ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರುವ ಶಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮುನ್ನಡೆ ಪಡೆದಿದ್ದಾರೆ.

ಶಿರಾ ಹಾಗೂ ಪಾವಗಡ ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹೆಚ್ಚು ಮತ ಪಡೆದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮೂರನೇ ಸ್ಥಾನ ಪಡೆದಿತ್ತು.

ಚಿತ್ರದುರ್ಗ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ 7 ಮಂದಿ ಕಾಂಗ್ರೆಸ್ ಶಾಸಕರಿದ್ದರೆ, ಒಂದು ಕಡೆ ಮಾತ್ರ ಬಿಜೆಪಿ ಶಾಸಕರಿದ್ದರು. ಮೊಳಕಾಲ್ಮೂರು ಮತ್ತು ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹೆಚ್ಚು ಮತ ಪಡದರೆ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಶಿರಾ ಮತ್ತು ಪಾವಗಡ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿದ್ದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದೆ ಕಾಂಗ್ರೆಸ್ ಸೋಲು ಅನುಭವಿಸಬೇಕಾಗಿದೆ.

ಶಿರಾ ಕ್ಷೇತ್ರದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ‌.ಜಯಚಂದ್ರ 86,084 ಮತಗಳನ್ನು ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಆರ್.ಉಗ್ರೇಶ್ 56,834, ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ 42,329 ಮತ ಪಡೆದಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೋವಿಂದ ಕಾರಜೋಳ 89,847 ಮತ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 77,353 ಮತ ಪಡೆದಿದ್ದಾರೆ.

ಪಾವಗಡ ಕ್ಷೇತ್ರದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್ 83,062 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ತಿಮ್ಮರಾಯಪ್ಪ 72,181, ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ 7206 ಮತ ಪಡೆದಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೋವಿಂದ ಕಾರಜೋಳ 73,792 ಮತಗಳನ್ನು, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 61,119 ಮತ ಪಡೆದಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಪಾವಗಡ ಕ್ಷೇತ್ರದಿಂದ ಬಿ.ಎನ್.ಚಂದ್ರಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಅಸಮಾಧಾನ ಈಗ ಕೆಲಸ ಮಾಡಿದೆ. ಶಾಸಕ ಎಚ್.ವಿ.ವೆಂಕಟೇಶ್ ಅವರ ತಂದೆ ಮಾಜಿ ಸಚಿವ ವೆಂಕಟರಮಣಪ್ಪ ಅವರು ಬಿ.ಎನ್.ಚಂದ್ರಪ್ಪ ಅವರನ್ನು ಬಹಿರಂಗವಾಗಿ ವಿರೋಧಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿ ಚಂದ್ರಪ್ಪ ಅವರನ್ನು ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶಿರಾದಲ್ಲಿ ಚುನಾವಣೆ ಜವಾಬ್ದಾರಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ವಹಿಸಿದ್ದು, ಪಕ್ಷದಲ್ಲಿನ ಅಸಮಾಧಾನದ ಲಾಭವನ್ನು ಮೈತ್ರಿಕೂಟ ಚೆನ್ನಾಗಿ ಬಳಸಿಕೊಂಡು ಮುನ್ನಡೆ ಗಳಿಸಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಗೆಲುವಿನಲ್ಲಿ ಶಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳ ಮತಗಳು ಮಹತ್ವ ಪಡೆದಿವೆ.

ಸೋತವರಿಗೆ ಮಣೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯಿಂದ ವಿಧಾನಸಭೆ ಚುನಾವಣೆಯಲ್ಲಿ ಸೋತವರಿಗೆ ಮಣೆ ಹಾಕುತ್ತಿರುವುದು ವಿಶೇಷವಾಗಿದೆ.

2019ರಲ್ಲಿ ಅನೇಕಲ್ಲು ವಿಧಾನಸಭೆ ಕ್ಷೇತ್ರದಲ್ಲಿ ಪರಾಜಿತರಾಗಿದ್ದ ಎ.ನಾರಾಯಣಸ್ವಾಮಿ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಯಿತು. ಮತದಾರರು ಅವರ ಪರ ಒಲವು ತೋರಿ ಆಯ್ಕೆ ಮಾಡಿದರು. ಅದೇ ರೀತಿ ಈ ಬಾರಿ ಸಹ ಮುಧೋಳದಲ್ಲಿ ಸೋಲು ಕಂಡಿದ್ದ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿದ ಕಾರಣ ಮತ್ತೆ ಮತದಾರರು ಅವರನ್ನು ಆಯ್ಕೆ ಮಾಡುವ ಮೂಲಕ ವಿಧಾನಸಭೆಯಲ್ಲಿ ಸೋತವರಿಗೆ ಲೋಕಸಭೆಗೆ ಕಳುಹಿಸಿರುವುದು ವಿಶೇಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT