ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಹಾಲು ದರ ಕಡಿತಕ್ಕೆ ರೈತರ ವಿರೋಧ

Published 29 ನವೆಂಬರ್ 2023, 7:42 IST
Last Updated 29 ನವೆಂಬರ್ 2023, 7:42 IST
ಅಕ್ಷರ ಗಾತ್ರ

ತುಮಕೂರು: ಹಾಲಿನ ದರ ಕಡಿತ ಮಾಡಿರುವುದನ್ನು ವಿರೋಧಿಸಿ ನಗರದ ಹೊರ ವಲಯದ ಮಲ್ಲಸಂದ್ರದಲ್ಲಿರುವ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಎದುರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಹೈನುಗಾರಿಕೆ ನಂಬಿ ರೈತರು ಜೀವನ ಸಾಗಿಸುತ್ತಿದ್ದಾರೆ. ಬೇಸಿಗೆಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಳವಾಗಿದೆ ಎಂಬ ಕಾರಣ ನೀಡಿ ಲೀಟರ್‌ಗೆ ₹2 ಕಡಿತ ಮಾಡಲಾಗಿದೆ. ಜತೆಗೆ ಪಶು ಆಹಾರ ದರವನ್ನು ಕೆ.ಜಿಗೆ ₹2 ಹೆಚ್ಚಿಸಲಾಗಿದೆ. ಇದರಿಂದ ರೈತರಿಗೆ ಒಟ್ಟು ₹4 ನಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಹಾಲು ದರ ಕಡಿತ ಮಾಡಿರುವ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಡಿ. 4ರ ವರೆಗೆ ಕಾಲಾವಕಾಶ ನೀಡಿದ್ದು, ದರ ಹೆಚ್ಚಳ ಮಾಡದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ತುಮುಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸ್, ‘ರೈತ ಸಂಘ ಸಲ್ಲಿಸಿರುವ ಮನವಿಯನ್ನು ರಾಜ್ಯ ಸರ್ಕಾರ, ಕೆಎಂಎಫ್‌ಗೆ ಕಳುಹಿಸಿಕೊಡಲಾಗುವುದು. ಅಲ್ಲಿಂದ ಬರುವ ಸೂಚನೆಯಂತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಹಾಲಿನ ಪ್ರೋತ್ಸಾಹ ಧನವನ್ನು ಆಗಸ್ಟ್ ವರೆಗೆ ನೀಡಲಾಗಿದೆ. ನಂತರದ ತಿಂಗಳ ಬಾಕಿ ಶೀಘ್ರವೇ ಬಿಡುಗಡೆಯಾಗಲಿದೆ. ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಹಾಲಿನ ಆವಕ ಹೆಚ್ಚಾಗುವುದರಿಂದ ಬೆಲೆ ಕಡಿಮೆ ಮಾಡಿಕೊಂಡು ಬರಲಾಗಿದೆ. ಬರದಿಂದ ಪಶು ಆಹಾರದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು, ಪಶು ಆಹಾರದ ಬೆಲೆ ಏರಿಕೆಯಾಗಿದೆ ಎಂದರು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೆ.ಎಸ್.ಧನಂಜಯ ಆರಾಧ್ಯ, ಮಹಿಳಾ ಘಟಕದ ಅಧ್ಯಕ್ಷೆ ಶಿವರತ್ನಮ್ಮ, ಮುಖಂಡರಾದ ನಾಗೇಂದ್ರ, ಸಣ್ಣದ್ಯಾಮೇಗೌಡ, ಮಲ್ಲಿಕಾರ್ಜುನಯ್ಯ, ಸಿದ್ದರಾಜು ಇತರರು ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT