ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬೀದಿಗೆ ಇಳಿದು ರೈತರ ಪ್ರತಿಭಟನೆ

Last Updated 9 ಡಿಸೆಂಬರ್ 2020, 5:34 IST
ಅಕ್ಷರ ಗಾತ್ರ

ತುಮಕೂರು: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ರಾಜ್ಯ ರೈತ ಸಂಘ, ಸಿಐಟಿಯು, ಸಿಪಿಎಂ, ಸಿಪಿಐ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಪ್ರತಿಭಟನೆಗೆ ಇಳಿದರು. ರೈತ ಸಂಘಟನೆ ಹಾಗೂ ಎಡಪಕ್ಷಗಳು ಪ್ರತ್ಯೇಕವಾಗಿ ಹೋರಾಟ ಕೈಗೊಂಡವು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಟೌನ್‌ಹಾಲ್ ಬಳಿ ರೈತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಹಾಗೂಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡು ರೈತರನ್ನು ಸರ್ವನಾಶ ಮಾಡಲು ಹೊರಟಿದೆ. ಸರ್ವಾಧಿಕಾರಿ ಧೋರಣೆ ತಾಳಿದ್ದು, ಹಿಟ್ಲರ್ ತತ್ವಗಳನ್ನು ಅಳವಡಿಸಿಕೊಂಡಿದೆ. ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದರು.

‘ದೇಶದ ಗಡಿ ರಕ್ಷಿಸಿ, ಉಗ್ರರನ್ನು ಸೆದೆ ಬಡಿಯಲು ನಮ್ಮ ಸೈನಿಕರನ್ನು ದೆಹಲಿಗೆ ಕಳುಹಿಸಿಕೊಟ್ಟಿದ್ದೇವೆ. ಆದರೆ ನಮ್ಮ ಸೈನಿಕರನ್ನೇ ಬಳಸಿಕೊಂಡು ರೈತರನ್ನು ಸೆದೆ ಬಡಿಯಲಾಗುತ್ತಿದೆ. ಪ್ರತಿ ದಿನವೂ ಹಿಂಸಿಸಲಾಗುತ್ತಿದೆ. ರೈತರ ಮೇಲೆ ದೌರ್ಜನ್ಯ ನಡೆಸಿ, ಅಮಾನುಷವಾಗಿ ನಡೆದುಕೊಳ್ಳುತ್ತಿದೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಮಾನವ ಹಕ್ಕುಗಳ ಆಯೋಗ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿ ಕುಳಿತಿದೆ. ಸುಪ್ರೀಂಕೋರ್ಟ್ ಮಧ್ಯೆ ಪ್ರವೇಶಿಸಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿಲ್ಲ. ತನಿಖಾ ಸಂಸ್ಥೆಗಳನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡು ರೈತರು, ಜನರನ್ನು ಹಿಂಸಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT