ಶುಕ್ರವಾರ, ಮೇ 27, 2022
27 °C

ಕಾನೂನು ಅರಿವಿನ ಮುಖಾಂತರ ಮಹಿಳಾ ಸಬಲೀಕರಣ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ಬುಧವಾರ ‘ಕಾನೂನು ಅರಿವಿನ ಮುಖಾಂತರ ಮಹಿಳಾ ಸಬಲೀಕರಣ’ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯಗಳಿಗೆ ಒಳಗಾಗದಂತೆ ತಡೆಯಲು ಎಲ್ಲರೂ ಕೈಜೋಡಿಸಬೇಕು. ಅವರ ಹಕ್ಕುಗಳನ್ನು ರಕ್ಷಿಸುವುದು, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿ, ಪ್ರತ್ಯೇಕ ಸ್ಥಾನಮಾನಗಳನ್ನು ನೀಡಿದ್ದರೂ ಸಹ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇವೆ. ದೌರ್ಜನ್ಯಗಳಾಗದಂತೆ ತಡೆದಾಗ ಮಾತ್ರ ಸಾಮಾಜಿಕ ಸಮಾನತೆ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಶಾಂತಮ್ಮ, ‘ಇತ್ತೀಚಿನ ದಿನಗಳಲ್ಲಿ ಶೇ 35ರಷ್ಟು ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿದ್ದು, ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ. ಯಶಸ್ವಿ ಮಹಿಳೆಯರು, ಯಶಸ್ಸು ಪಡೆಯುವಲ್ಲಿ ವಿಫಲರಾದ ಮಹಿಳೆಯರ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಇಂದಿನ ಮಕ್ಕಳು ಅತಿಯಾಗಿ ಮೊಬೈಲ್ ಬಳಕೆಯಿಂದಾಗಿ ತಪ್ಪುದಾರಿ ಹಿಡಿಯುತ್ತಿದ್ದು, ಪೋಷಕರು ಎಚ್ಚರ ವಹಿಸಬೇಕು. ಅವಶ್ಯಕತೆಗಿಂತ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವುದನ್ನು ತಡೆಯುವುದು, ಇನ್ನಿತರ ಅನುಮಾನಾಸ್ಪದ ನಡವಳಿಕೆಗಳ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ‘ಕೇವಲ ಆಸ್ತಿ, ಹಣ ಇನ್ನಿತರ ಐಷಾರಾಮಿ ಜೀವನಕ್ಕೆ ಪ್ರಾಮುಖ್ಯತೆ ನೀಡದೆ ಪ್ರೀತಿ, ವಿಶ್ವಾಸದಿಂದ ಬದುಕಿದಾಗ ಸಾರ್ಥಕ ಜೀವನ ಸಾಧ್ಯವಾಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಪ್ರೀತಿ, ಕಾಳಜಿಯಿಂದ ಬೆಳೆಸಿದರೆ ತಪ್ಪು ಮಾಡುವ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪ್ರಮಾಣ ಕಡಿಮೆ ಇರುತ್ತದೆ’ ಎಂದು ಹೇಳಿದರು.

ವಿದ್ಯೋದಯ ಕಾನೂನು ಕಾಲೇಜು ಸಹಾಯಕ ಪ್ರಾಂಶುಪಾಲ ದ್ಯಾನ ಬಸವರಾಜು, ‘ಮಹಿಳೆಯರ ಆಸ್ತಿ ಹಕ್ಕುಗಳು’ ಮತ್ತು ವಕೀಲರಾದ ಬೇಬಿ ಕವಿತಾ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳಾ ಸಂರಕ್ಷಣಾ ಕಾಯ್ದೆ, ಪೋಕ್ಸೊ ಕಾಯ್ದೆ, ಮಹಿಳೆ ಮತ್ತು ಮಕ್ಕಳ ಸಾಗಣೆ’ ಕುರಿತು ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಮತ್ತಿತರರು ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.