ರೈತರಿಗೆ ಸಾಲ ಸೌಲಭ್ಯ ನೀಡಿ

ಮಂಗಳವಾರ, ಮಾರ್ಚ್ 26, 2019
31 °C

ರೈತರಿಗೆ ಸಾಲ ಸೌಲಭ್ಯ ನೀಡಿ

Published:
Updated:
Prajavani

ತುಮಕೂರು: ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳಲು ಸಹಕಾರಿ ಸಂಘಗಳು ಸಾಲ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಸಂಸದ ಎಸ್‌.ಪಿ.ಮುದ್ದಹನುಮೇಗೌಡ ತಿಳಿಸಿದರು.

ನಗರದ ಸಹಕಾರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ಹಾಗೂ ಸಹಕಾರ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

’ಮಳೆ ಕೊರತೆ, ಬೆಳೆ ನಷ್ಟಗಳಿಂದ ರೈತ ಸಾಲದ ಹೊರೆ ಅನುಭವಿಸುತ್ತಿದ್ದು, ಆರ್ಥಿಕವಾಗಿ ಕುಗ್ಗುತ್ತಿದ್ದಾನೆ. ಈ ನಿಟ್ಟಿನಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸಹಕಾರ ಸಂಘಗಳು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗುವಂತೆ ಮಾಡಬೇಕು’ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಎನ್.ಚಂದ್ರಪ್ಪ ಮಾತನಾಡಿ,‘ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದಾಯ ತೆರಿಗೆ ಮತ್ತು ಜಿಎಸ್‌ಟಿ ನಿಯಮಗಳನ್ನು ಅರಿತು ಸೇವೆ ಸಲ್ಲಿಸಬೇಕು. ಸಾಲ ಮರು ಪಾವತಿಸುವಂತಹ ನೌಕರರಿಗೆ, ಉದ್ಯೋಗಸ್ತರಿಗೆ ಮಾತ್ರ ಸಾಲ ನೀಡಬೇಕು’ ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್.ಗಂಗಣ್ಣ ಮಾತನಾಡಿ,‘ನಿರುದ್ಯೋಗಿ ಯುವಕ ಯುವತಿಯರು ಸ್ವಾವಲಂಬನೆಯಿಂದ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಬ್ಯಾಂಕುಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದರು.

ಲೆಕ್ಕ ಪರಿಶೋಧಕ ಅನಿಲ್ ಭಾರದ್ವಾಜ್, ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಎಚ್.ಎಸ್.ನಾಗರಾಜಯ್ಯ ಅವರು ಜಿಎಸ್‌ಟಿ, ಆದಾಯ ತೆರಿಗೆ ಪಾವತಿ ನಿಯಮ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ.ವೆಂಕಟೇಗೌಡ, ಜಿಲ್ಲಾ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಸಿ.ವಿ. ಮಹಾಲಿಂಗಯ್ಯ, ರಾಜ್ಯ ಸಹಕಾರ ಪತ್ತಿನ ಸಹಕಾರ ಸಂಘಗಳ ಮಹಾ ಮಂಡಳದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಆಶಾಲತಾ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ಆರ್. ಸುರೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !