ಮಧುಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಸೋಮವಾರ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂಭಾಗ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾವಣೆಗೊಂಡು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು.
ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ. ಕೇಂದ್ರದ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ.
ಸಿದ್ದರಾಮಯ್ಯ ಭ್ರಷ್ಟಾಚಾರ ರಹಿತವಾಗಿ ಆರೂವರೆ ವರ್ಷವರೆಗೆ ಜನಪರ ಆಡಳಿತ ನೀಡಿದ್ದಾರೆ. ದಲಿತರು, ಎಲ್ಲರ ಪರವಾಗಿ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದೆ ಬಿಜೆಪಿಯವರು ಕುತಂತ್ರ ಮಾಡಿ ಮುಡಾ ಹಗರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಇಲ್ಲದೇ ಆಡಳಿತ ನೀಡಿರುವುದು ಇಡೀ ರಾಜ್ಯದ ಜನರು ಮೆಚ್ಚಿದ್ದಾರೆ. ಆದರೆ, ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡು ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಮುಂದಾಗಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆದಿನಾರಾಯಣರೆಡ್ಡಿ, ಗೋಪಾಲಯ್ಯ, ಕೆಪಿಸಿಸಿ ಸದಸ್ಯ ಎಂ.ಎಸ್.ಮಲ್ಲಿಕಾರ್ಜುನಯ್ಯ, ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಕೆ.ನಂಜುಂಡಯ್ಯ, ಕೆ.ಪ್ರಕಾಶ್,ಎನ್.ಗಂಗಣ್ಣ,ಸದಸ್ಯರಾದ ಅಲೀಂ, ಸುಜಾತ ನಾರಾಯಣ್, ಶೋಭರಾಣಿ, ನಾಗಲತಾ ,ಲಾಲಾಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ಪಾರ್ವತಮ್ಮ, ಮುಖಂಡರಾದ ಕೇಬಲ್ ಸುಬ್ಬು ,ಮನು,ವಿನಯ್, ಎಂ.ಬಿ.ಮರಿಯಣ್ಣ,ಟಿ.ರಾಮಣ್ಣ,ಇಂದಿರಾ,ಸುವರ್ಣಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.