ಮಂಗಳವಾರ, ಅಕ್ಟೋಬರ್ 27, 2020
22 °C
ಹಾಲನೂರು ಲೇಪಾಕ್ಷ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ

ತುಮಕೂರು: ಬಿಜೆಪಿಯಲ್ಲಿ ಬಂಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಡಾ.ಹಾಲನೂರು ಎಸ್.ಲೇಪಾಕ್ಷ ಪ್ರಕಟಿಸಿದ್ದಾರೆ. ಬುಧವಾರ ನಾಮಪತ್ರ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

‘ಪಕ್ಷದಲ್ಲಿ ಬಂಡಾಯ ಇಲ್ಲ. ಭಿನ್ನಮತ ಸರಿಪಡಿಸಲಾಗಿದೆ. ಅಂತಹವರ ಜತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ರವಿಕುಮಾರ್ ಮಂಗಳವಾರ ಸ್ಪಷ್ಟಪಡಿಸಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಭಿನ್ನಮತ ಸ್ಫೋಟಿಸಿದೆ.

‘2018ರಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೆ. ಟಿಕೆಟ್ ನೀಡುವ ಭರವಸೆಯಿಂದಾಗಿ ಒಂದು ವರ್ಷ ಕಾಲ ಸುತ್ತಾಟ ನಡೆಸಿ ಶಿಕ್ಷಕ ಮತದಾರರನ್ನು ಸಂಘಟಿಸಿದ್ದೆ. ಆದರೆ ಬೆಂಗಳೂರು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸೋತಿದ್ದ ವೈ.ಎ.ನಾರಾಯಣಸ್ವಾಮಿ ಅವರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಲಾಯಿತು’ ಎಂದು ಲೇಪಾಕ್ಷ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭರವಸೆ ನೀಡಿದ್ದರು. ಆದರೆ ಟಿಕೆಟ್ ಕೊಡಲಿಲ್ಲ. ಈವರೆಗೂ ನನ್ನ ಜತೆ ಸೌಜನ್ಯಕ್ಕೂ ಮಾತನಾಡಿಲ್ಲ. ರವಿಕುಮಾರ್ ದೂರವಾಣಿ ಮೂಲಕ ಸಂಪರ್ಕಿಸಿದರು. ನಾನು ಸ್ಪರ್ಧಿಸುವುದಾಗಿ ಹೇಳಿದ್ದೇನೆ. ಆದರೆ ಅವರು ಭಿನ್ನಮತ ಸರಿಪಡಿಸಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ’ ಎಂದು ಹೇಳಿದರು.

‘ಪಕ್ಷಾಂತರ ಮಾಡಿ ಬಂದವರಿಗೆ ಟಿಕೆಟ್ ನೀಡಲಾಗಿದೆ. ಯಡಿಯೂರಪ್ಪ, ಬಿಜೆಪಿಯನ್ನು ಟೀಕಿಸಿದವರಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಜನರ ಮುಂದೆ ಹೋಗುತ್ತೇನೆ. ಜನರೇ ತೀರ್ಪು ನೀಡಲಿ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು