ಮಧುಗಿರಿ: ಅಂಬೇಡ್ಕರ್ ವಸತಿ ಶಾಲೆ ಉದ್ಘಾಟನೆ

ಮಧುಗಿರಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ವಸತಿ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು.
ತಾಲ್ಲೂಕಿನ ಸೋದೇನಹಳ್ಳಿಯಲ್ಲಿ ₹18 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಕೋವಿಡ್ ನಡುವೆಯೂ ಸರ್ಕಾರ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಮುಂಜಾಗ್ರತಾ ವಹಿಸಿ ಶಾಲೆ ತೆರೆದಿದೆ. ಎಲ್ಲ ಮಕ್ಕಳಿಗೂ ಉಚಿತವಾಗಿ ಲ್ಯಾಪ್‌ಟಾಪ್ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ವಿದ್ಯಾಬ್ಯಾಸ ಮಾಡಬೇಕು. ಕೊರಟಗೆರೆ, ಮಧುಗಿರಿ ಹಾಗೂ ಶಿರಾ ತಾಲ್ಲೂಕು ಒಳಗೊಂಡಿರುವ ಪ್ರದೇಶದಲ್ಲಿ ವಿಮಾನ ನಿಲ್ದಾಣ ಮಾಡುವಂತೆ ಹಾಗೂ ಮಧುಗಿರಿ ತಾಲ್ಲೂಕಿನಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಉತ್ತಮ ವಿದ್ಯಾಬ್ಯಾಸ ಮಾಡಿ ಉತ್ತಮ ಪ್ರಜೆಯಾಗಬೇಕು. ಸರ್ಕಾರ ನೀಡುವ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎತ್ತಿನಹೊಳೆ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಂಡು, ಕೆರೆಗಳಿಗೆ ನೀರು ಹರಿದರೆ ರೈತರ ಬದುಕು ಹಸನಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಇಂತಹ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಶಮೀಮ್ ಉನ್ನೀಸ್, ಪ್ರಾಂಶುಪಾಲ ಪಿ.ಟಿ ಈರಣ್ಣ , ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್, ಗ್ರಾ.ಪಂ.ಅಧ್ಯಕ್ಷೆ ಕೆ.ಟಿ.ಸವಿತಾ, ಉಪಾಧ್ಯಕ್ಷೆ ಚಿಕ್ಕತಾಯಮ್ಮ, ಸದಸ್ಯರು ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.