ಬುಧವಾರ, ಸೆಪ್ಟೆಂಬರ್ 22, 2021
29 °C

ತುಮಕೂರು: ಹೆಚ್ಚಿದ ಮಕ್ಕಳ ಭಿಕ್ಷಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದಲ್ಲಿ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿರುವವರ ಸಂಖ್ಯೆ ಸಾಕಷ್ಟು ಸಂಖ್ಯೆಯಲ್ಲಿ ಕಂಡು ಬರುತ್ತಿದೆ. ದಾಳಿ ನಡೆಸಿ ಮಕ್ಕಳನ್ನು ರಕ್ಷಿಸಿ ಹತ್ತಿರದ ಸಾಂತ್ವನ ಕೇಂದ್ರಗಳಿಗೆ ಸೇರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ‘ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಸೇರಿದಂತೆ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹಗಳು ಹೆಚ್ಚು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಂತಹ ಕಡೆಗಳಲ್ಲಿ ಅರಿವು ಮೂಡಿಸುವ ಮೂಲಕ ಕಡಿವಾಣ ಹಾಕಬೇಕು’ ಎಂದು ನಿರ್ದೇಶಿಸಿದರು.

ಶಾಲಾ ಕಟ್ಟಡಗಳ ಬಳಿ ಅಪಾಯಕಾರಿಯಾಗಿರುವ ವಿದ್ಯುತ್ ಕಂಬ, ಶಾಲಾ ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ಸಮಸ್ಯೆ ಹಾಗೂ ಸಹಾಯಕ್ಕಾಗಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ ಮಕ್ಕಳ ಸಂಪೂರ್ಣ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಬೇಕು. ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ದೂರುಗಳನ್ನು ಆಧರಿಸಿ ಮಕ್ಕಳನ್ನು ಭೇಟಿ ಮಾಡಿ ಪರಿಶೀಲಿಸಿ ರಕ್ಷಣೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ‘ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು’ ಎಂದು ನಿರ್ದೇಶಿಸಿದರು.

ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಬಾಲ್ಯ ವಿವಾಹ, ಪೋಕ್ಸೊ, ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಸೇರಿದಂತೆ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣ, ಮಕ್ಕಳ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.