ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈತಿಕ ಚುನಾವಣೆಗೆ ಸಹಕಾರ ಅಗತ್ಯ

ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ ಕಾರ್ಯಕ್ರಮ
Last Updated 5 ಏಪ್ರಿಲ್ 2018, 10:33 IST
ಅಕ್ಷರ ಗಾತ್ರ

ಮಂಡ್ಯ: ‘ಜಿಲ್ಲೆಯಾದ್ಯಂತ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಈ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಹೇಳಿದರು.ಸರ್ಕಾರಿ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.‘ಸದೃಢ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರೂ ವಿವೇಚನೆಯಿಂದ ಮತಚಲಾವಣೆ ಮಾಡಬೇಕು. ಮತದಾನ ಅಮೂಲ್ಯವಾದ ಪ್ರಕ್ರಿಯೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದವರು ಅರ್ಜಿ ನಮೂನೆ-6 ಪಡೆದು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಮತದಾರ ಪಟ್ಟಿಯಲ್ಲಿ ದೋಷ ಸರಿಪಡಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಬಿ.ಶರತ್ ಅವರು ಮಾತನಾಡಿ ‘ನೈತಿಕ ಮತದಾನ ಮಾಡಲು ಯುವ ಪೀಳಿಗೆ ಮುಂದಾಗಬೇಕು. ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವಂತಹ ಕೆಲಸಗಳನ್ನು ಯುವ ಜನರು ಹೆಚ್ಚಾಗಿ ಮಾಡಬೇಕು. ಜಿಲ್ಲೆಯ ಎಲ್ಲಾ ಕಾಲೇಜಿನಲ್ಲಿ ಇರುವ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳ ಸೇವೆಯನ್ನು ಮತದಾನದ ದಿನದಂದು ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ಸಹಾಯ ಮಾಡಲು ಬಳಸಿಕೊಳ್ಳಲಾಗುವುದು’ ಎಂದರು.

‘ವಿಧಾನಸಭಾ ಕ್ಷೇತ್ರವಾರು ಮತಗಟ್ಟೆ ಸಂಖ್ಯೆ ಹಾಗೂ ಇನ್ನಿತರೆ ಮಾಹಿತಿ ಬಗ್ಗೆ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗ ಮೊಬೈಲ್ ಎಸ್.ಎಂ.ಎಸ್ ಆ್ಯಪ್ ಪ್ರಾರಂಭಿಸಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ, ಮೊಬೈಲ್ ಮೂಲಕ ಎಸ್.ಎಂ.ಎಸ್ ಪಡೆದುಕೊಂಡು ಮತದಾನ ಮಾಡಬಹುದಾಗಿದೆ. ಜಿಲ್ಲೆಯ ಮತದಾರರು ಈ ಸೇವೆಯ ಸದುಪಯೋಗ ಪಡಿಸಿಕೊಳ್ಳಬಹುದು’ ಎಂದರು.

ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಶಿವನಂಜೇಗೌಡ, ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ನೋಡಲ್ ಅಧಿಕಾರಿ ರಾಮಕೃಷ್ಣ, ಸಹಾಯಕ ನೋಡೆಲ್ ಅಧಿಕಾರಿ ಶಾಂತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT