ತುಮಕೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಸೆ.9ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
‘ಮೀಸಲಾತಿಯು 101 ಜಾತಿಗಳಿಗೆ ಸಮನಾಗಿ ಹಂಚಿಕೆಯಾಗಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದ್ದು, ಹಲವು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ನ್ಯಾಯಾಲಯವು ಒಳ ಮೀಸಲಾತಿ ಜಾರಿಗೊಳಿಸುವ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ಆದರೆ ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್.ಮೂರ್ತಿ ಇಲ್ಲಿ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಿಂದ ಮುಖ್ಯಮಂತ್ರಿ ನಿವಾಸದ ವರೆಗೆ ಪಾದಯಾತ್ರೆ ನಡೆಸಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಚಿವರಾದ ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಸೇರಿದಂತೆ ದಲಿತ ಸಮುದಾಯ ಶಾಸಕರು ಒಳ ಮೀಸಲಾತಿ ಜಾರಿ ಕುರಿತು ತುಟಿ ಬಿಚ್ಚುತ್ತಿಲ್ಲ. ಇದು ಅವರ ಸೋಗಲಾಡಿತನಕ್ಕೆ ಸಾಕ್ಷಿಯಾಗಿದೆ. ಮೀಸಲಾತಿಯಿಂದ ಆಯ್ಕೆಯಾಗಿರುವ ಶಾಸಕರು ತಮ್ಮ ಸ್ಥಾನಕ್ಕೆ ನೀಡಲಿ ಎಂದರು.
ಗ್ಯಾರಂಟಿಗೆ ಬಳಸಿಕೊಳ್ಳುತ್ತಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಕೂಡಲೇ ವಾಪಸ್ ನೀಡಬೇಕು. ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಯೋಜನೆ ಮರು ಜಾರಿಗೊಳಿಸಬೇಕು. ಒಳ ಮೀಸಲಾತಿ ಜಾರಿಯಾಗುವ ತನಕ ಎಲ್ಲ ನೇಮಕಾತಿ ಮುಂದೂಡಬೇಕು ಎಂದು ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ, ಮುಖಂಡರಾದ ಎ.ರಂಜನ್, ಹಟ್ಟಪ್ಪ, ಪರಮೇಶ್ ಇತರರು ಹಾಜರಿದ್ದರು.