ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಜೀವನ್ ಮಿಷನ್: ಗ್ರಾಮವಾರು ಕ್ರಿಯಾ ಯೋಜನೆಗೆ ಸೂಚನೆ

Last Updated 7 ನವೆಂಬರ್ 2021, 3:55 IST
ಅಕ್ಷರ ಗಾತ್ರ

ತುಮಕೂರು: ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ರೂಪಿಸಿರುವ ಕೇಂದ್ರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಎರಡು ವಾರದಲ್ಲಿ ಗ್ರಾಮವಾರು ಕ್ರಿಯಾಯೋಜನೆ ತಯಾರಿಸಿ ವರದಿ ನೀಡುವಂತೆ ಸಂಸದ ಜಿ.ಎಸ್.ಬಸವರಾಜು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶನಿವಾರ ನಡೆದ ದಿಶಾ ಸಮಿತಿ ಸಭೆಅಧ್ಯಕ್ಷತೆ ವಹಿಸಿ ಮಾತನಾಡಿ, ‘ಎರಡು ವಾರದಲ್ಲಿ ಕ್ರಿಯಾಯೋಜನೆ ಸಲ್ಲಿಸದ ಅಧಿಕಾರಿಗಳ ವಿರುದ್ಧ ಕೇಂದ್ರಕ್ಕೆ ವರದಿ ನೀಡಲಾಗುವುದು’ ಎಂದು ಎಚ್ಚರಿಸಿದರು.

ಅನುಷ್ಠಾನ ಮಾಡುವ ಯೋಜನೆಗಳ ವಿವರ, ಬಿಡುಗಡೆಯಾದ ಅನುದಾನ, ಪ್ರಗತಿ, ಫಲಾನುಭವಿಗಳ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಜಿಐಎಸ್‌ನಲ್ಲಿ ಅಪ್‍ಲೋಡ್ ಮಾಡಬೇಕು ಎಂದು ಹೇಳಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ 3ನೇ ಹಂತದಲ್ಲಿ ಅಕ್ಟೋಬರ್ ಅಂತ್ಯಕ್ಕೆ ₹41.35 ಕೋಟಿ ಅನುದಾನ ಬಿಡುಗಡೆಯಾಗಿದ್ದು, 63.62 ಕಿ.ಮೀ ರಸ್ತೆ ಕಾಮಗಾರಿ ಕೈಗೊಂಡಿದ್ದು, ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ಪಿಎಂಜಿಎಸ್‍ವೈ ಕಾರ್ಯಪಾಲಕ ಎಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.

ನಗರದ ಮರಳೂರು ದಿಣ್ಣೆಯ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಿಕೊಂಡವರಿಗೆ ಪಾಲಿಕೆ ವತಿಯಿಂದ ಸೌಲಭ್ಯ ನೀಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳು ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಸಭೆಗೆ ನೀಡಿದ ಮಾಹಿತಿ ಸುಳ್ಳು ಎಂದು ತಿಳಿದು ಬಂದರೆ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ‘ಒತ್ತುವರಿಯಾಗಿರುವ ಸರ್ಕಾರಿ ಜಮೀನಿನ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸಬೇಕು. ಸರ್ವೆ ಕಾರ್ಯ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಜಿಲ್ಲೆಯಲ್ಲಿ ತೆಂಗು ಬೆಳೆ ಆಯ್ಕೆಯಾಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯ ಶಾಖಾ ಕಚೇರಿ ತೆರೆಯಲು ಕ್ರಮ ಕೈಗೊಳ್ಳಬೇಕು. ಗುಬ್ಬಿ, ಚಿಕ್ಕನಾಯಕನಹಳ್ಳಿ ಭಾಗದಲ್ಲಿ ತೆಂಗು ಬೆಳೆಗೆ ರೋಗ ತಗುಲಿ ಇಳುವರಿ ಕಡಿಮೆಯಾಗಿದ್ದು, ಲಕ್ಷಾಂತರ ಮರಗಳು ಒಣಗುತ್ತಿವೆ. ರೋಗ ನಿಯಂತ್ರಿಸಲು ಅಗತ್ಯ ಕಾರ್ಯಕ್ರಮ ರೂಪಿಸುವಂತೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಲೋಗಾನಂದನ್ ಅವರಿಗೆ ಸಲಹೆ ಮಾಡಿದರು.

ಉಪವಿಭಾಗಾಧಿಕಾರಿ ಅಜಯ್, ‘ಮುಖ್ಯಮಂತ್ರಿಗಳ ನಗರ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಪಾಲಿಕೆ ವ್ಯಾಪ್ತಿಯ ಸತ್ಯಮಂಗಲ, ಮರಳೇನಹಳ್ಳಿ, ಹೊನ್ನೇನಹಳ್ಳಿ, ಶಂಭೋನಹಳ್ಳಿಯಲ್ಲಿ 15.13 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ವಸತಿ ರಹಿತ ಫಲಾನುಭವಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 217.2 ಎಕರೆ ಜಮೀನು ಗುರುತಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರಧಾನ ಮಂತ್ರಿ ಅವಾಜ್ ಯೋಜನೆ ಪ್ರಗತಿಯನ್ನು ಸಂಸದರು ಪರಿಶೀಲಿಸಿದರು. ನಿಗದಿಪಡಿಸಿರುವ 75,598 ಮನೆಗಳ ನಿರ್ಮಾಣದ ಪೈಕಿ 5,356 ಮನೆಗಳು ಮಾತ್ರ ಪೂರ್ಣಗೊಂಡಿದ್ದು, ಈವರೆಗೆ 589 ಮನೆಗಳ ಕಾಮಗಾರಿಯನ್ನೇ ಕೈಗೆತ್ತಿಕೊಳ್ಳದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಶೀಘ್ರವೇ ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದರು.

ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳನ್ನು ಸಮರ್ಪಕವಾಗಿ ಕಾಲಮಿತಿಯೊಳಗೆ ಅಭಿವೃದ್ಧಿಗೊಳಿಸಬೇಕು. ಶಾಲೆ, ಶೌಚಾಲಯ, ಅಂಗನವಾಡಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ, ತೋಟಗಾರಿಕೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ‘ದಿಶಾ ಪೋರ್ಟಲ್‍ಗೆ ಕಳೆದ ಎರಡು ವರ್ಷಗಳಿಂದ ಯಾವುದೇ ಇಲಾಖೆಗಳು ಮಾಹಿತಿ ಅಪ್‌ಲೋಡ್ ಮಾಡಿಲ್ಲ. ಕಡ್ಡಾಯವಾಗಿ ದಾಖಲಿಸಬೇಕು’ ಎಂದು ತಿಳಿಸಿದರು.

ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT