ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರ

ಕಾನೂನು ಸೇವಾ ಕೇಂದ್ರ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹಂಚಾಟೆ ಸಂಜೀವಕುಮಾರ್
Last Updated 7 ಫೆಬ್ರುವರಿ 2020, 15:17 IST
ಅಕ್ಷರ ಗಾತ್ರ

ತುಮಕೂರು: ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾಗುವ ವ್ಯಕ್ತಿಗಳಿಗೆ ಕಾನೂನು ನೆರವು ನೀಡುವ ಸಲುವಾಗಿ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹಂಚಾಟೆ ಸಂಜೀವಕುಮಾರ್ ತಿಳಿಸಿದರು.

ನಗರದ ತಿಲಕ್‌ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆರಂಭಿಸಿರುವ ಕಾನೂನು ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಆಯ್ದ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಮೊದಲ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ ಎಂದರು.

‌ಠಾಣೆಗಳಿಗೆ ಬರುವ ಸಾರ್ವಜನಿಕರಿಗೆ ಹಾಗೂ ದಸ್ತಗಿರಿ ಆಗಿ ಬಂದ ಆರೋಪಿಗಳಿಗೆ ಕಾನೂನು ನೆರವು ಸಹಾಯ ನೀಡುವ ಮೂಲಕ ಸಣ್ಣ-ಪುಟ್ಟ ಸಮಸ್ಯೆಗಳನ್ನು ರಾಜಿಯಾಗುವ ಮೂಲಕ ಠಾಣೆಯಲ್ಲಿ ಬಗೆಹರಿಸಿಕೊಳ್ಳುವುದು ಸೇವಾ ಕೇಂದ್ರದ ಉದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ‘ಪೊಲೀಸ್ ಠಾಣೆಗೆ ಬರುವ ಆರೋಪಿಗಳಿಗೆ, ಸಾರ್ವಜನಿಕರಿಗೆ ಸಲಹೆ, ಮಾರ್ಗದರ್ಶನ ನೀಡುವುದಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತಿಲಕ್ ಪಾರ್ಕ್ ಠಾಣೆಯಲ್ಲಿ ಜಿಲ್ಲಾ ಕಾನೂನು ಸೇವಾ ಕೇಂದ್ರ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಮಹಿಳಾ ಪೊಲೀಸ್ ಠಾಣೆ ಸೇರಿದಂತೆ 12 ಠಾಣೆಯಲ್ಲಿ ಸೇವಾ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅನಿಲ್, ಸಲಹೆಗಾರ ಭೋಜರಾಜು, ವಕೀಲ ದೇವರಾಜು, ಸರ್ಕಲ್ ಇನ್‌ಸ್ಪೆಕ್ಟರ್ ಪಾರ್ವತಮ್ಮ, ಸಬ್‍ ಇನ್‌ಸ್ಪೆಕ್ಟರ್ ಭಾಗ್ಯಲಕ್ಷಿ, ನವೀನ್, ಹನುಮಂತರಾಯಪ್ಪ, ಅಬ್ದುಲ್ ರಹೀಮ್, ಶೆಟ್ಟಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT