ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂದೆ-ತಾಯಿ ಕಷ್ಟ ಅರಿಯಿರಿ: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ

Published 29 ನವೆಂಬರ್ 2023, 7:43 IST
Last Updated 29 ನವೆಂಬರ್ 2023, 7:43 IST
ಅಕ್ಷರ ಗಾತ್ರ

ತುಮಕೂರು: ವಿದ್ಯಾರ್ಥಿಗಳಿಗೆ ತಂದೆ-ತಾಯಿ ಪಡುವ ಕಷ್ಟದ ಅರಿವು ಇರಬೇಕು. ಉತ್ತಮ ಶಿಕ್ಷಣ ಪಡೆದು ಉನ್ನತ ಅಧಿಕಾರಿಗಳಾಗಿ ರಾಷ್ಟ್ರದ ಸೇವೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸಲಹೆ ಮಾಡಿದರು.

ನಗರದ ಗೆದ್ದಲಹಳ್ಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ, ವಿದ್ಯಾರ್ಥಿನಿಯರಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆ ರೂಪಿಸಿದ್ದು, ಶಾಲಾ–ಕಾಲೇಜು ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳನ್ನು ಆರಂಭಿಸಿದೆ. ಉನ್ನತ ಸಾಧನೆ ಮಾಡುತ್ತಿರುವ ವ್ಯಕ್ತಿಗಳು ಬಡತನದಿಂದ ಬಂದವರೇ ಆಗಿರುತ್ತಾರೆ. ಸರ್‌ ಎಂ.ವಿಶ್ವೇಶ್ವರಯ್ಯ, ಡಾ.ಬಿ.ಆರ್.ಅಂಬೇಡ್ಕರ್‌ ಕಷ್ಟದ ದಿನಗಳನ್ನು ಎದುರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ‘ಜಿಲ್ಲೆಯ 100 ವಸತಿ ಶಾಲೆಗಳಲ್ಲಿ 12 ಸಾವಿರ ವಿದ್ಯಾರ್ಥಿಗಳಿದ್ದಾರೆ. ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಪರಮೇಶ್ವರ ಅವರು ಸೂಚಿಸಿದಂತೆ 4 ಸಾವಿರ ಹಾಸಿಗೆ, 3 ಸಾವಿರ ವಿದ್ಯಾರ್ಥಿಗಳು ಉಪಯೋಗಿಸುವ ಎರಡು ಅಂತಸ್ತಿನ 1,500 ಮಂಚಗಳು, ಹೊದಿಕೆ ಪೂರೈಸಲಾಗಿದೆ. ಸಿ.ಸಿ ಟಿ.ವಿ ಕ್ಯಾಮೆರಾ ವ್ಯವಸ್ಥೆ, ಕುಡಿಯುವ ನೀರಿನ ಘಟಕ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಜಿಲ್ಲಾಧಿಕಾರಿ ಕಲ್ಪಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ, ನಿರ್ಮಿತಿ ಕೇಂದ್ರದ ರಾಜಶೇಖರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ತಹಶೀಲ್ದಾರ್ ಸಿದ್ದೇಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT