ಶನಿವಾರ, ಜನವರಿ 23, 2021
19 °C
ತುಮಕೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆ

ಎಸ್‌ಟಿ ಹೋರಾಟ: ಸಿದ್ದರಾಮಯ್ಯ ಮನವೊಲಿಕೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಾಲ್ಗೊಳ್ಳುವಂತೆ ಅವರ ಮನವೊಲಿಸಲು ಇಲ್ಲಿ ಭಾನುವಾರ ನಡೆದ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಎಸ್‌ಟಿ ಮೀಸಲಾತಿ ಹೋರಾಟ ಮತ್ತು ಸಿದ್ದರಾಮಯ್ಯ ಅವರು ಪಾಲ್ಗೊಳ್ಳದ ವಿಚಾರವೇ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಿದೆ.

ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಟಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಶಾಂತಪ್ಪ, ‘ಸಿದ್ದರಾಮಯ್ಯ ಅವರು ಹೋರಾಟದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಸಮಾಜದ ಸ್ವಾಮೀಜಿಗಳು, ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು, ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇವೆ. ಅವರಲ್ಲಿರುವ ಸಂಶಯಗಳನ್ನು ಪರಿಹರಿಸುತ್ತೇವೆ. ನಮ್ಮ ಹೋರಾಟಕ್ಕೆ ಅವರು ವಿರೋಧವಾಗಿಲ್ಲ’ ಎಂದು ಹೇಳಿದರು.

ಆರ್‌ಎಸ್‌ಎಸ್ ಈ ಹೋರಾಟದ ಹಿಂದಿದೆ ಎನ್ನುವುದು ಸೇರಿದಂತೆ ಕೆಲವು ಭಿನ್ನಾಭಿಪ್ರಾಯಗಳು, ಸಮಸ್ಯೆಗಳು ಮತ್ತು ಸಂಶಯಗಳು ಅವರಲ್ಲಿ ಇವೆ. ಎಸ್‌ಟಿ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜ.15ರಿಂದ ಕಾಗಿನೆಲೆಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಅವರು ಪಾಲ್ಗೊಳ್ಳುವಂತೆ ಮನವೊಲಿಸುತ್ತೇವೆ ಎಂದು ತಿಳಿಸಿದರು.

ಪ್ರದೇಶ ಕುರುಬರ ಸಂಘದ ಕಾರ್ಯದರ್ಶಿ ಡಿ.ವೆಂಕಟೇಶಮೂರ್ತಿ ಮಾತನಾಡಿ, ‘ಕುರುಬರ ಅಭಿವೃದ್ಧಿ ಪ್ರಾಧಿಕಾರ’ ರಚಿಸುವಂತೆ ಈಗಾಗಲೇ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಕೂಡಲೇ ಪ್ರಾಧಿಕಾರ ರಚಿಸಿ ₹400 ಕೋಟಿ ಮೀಸಲಿಬೇಕು ಎಂದು ಒತ್ತಾಯಿಸಿದರು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕುಲಶಾಸ್ತ್ರ ಅಧ್ಯಯನ ಸಮಿತಿಯನ್ನು ಸರ್ಕಾರ ರಚಿಸಿತ್ತು. ಆರು ತಿಂಗಳ ಒಳಗೆ ವರದಿ ನೀಡಬೇಕು ಎಂದು ಸೂಚಿಸಿತ್ತು. ಆದರೆ ಆ ಸಮಿತಿ ಇಲ್ಲಿಯವರೆಗೂ ವರದಿಯನ್ನು ಸರ್ಕಾರಕ್ಕೆ ನೀಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಿತಿ ಅಧ್ಯಕ್ಷರಿಂದ ವರದಿಯನ್ನು ತಕ್ಷಣ ತರಿಸಿಕೊಳ್ಳಬೇಕು. ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎಂದು ರಾಜ್ಯ ಸರ್ಕಾರವು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು. 

ತಟಸ್ಥವಾಗುವ ಎಚ್ಚರಿಕೆ

ಕುರುಬರ ಸಂಘದ ಶಿವಮೊಗ್ಗ ಜಿಲ್ಲೆಯ ನಿರ್ದೇಶಕ ರಂಗನಾಥ್ ಹಾಗೂ ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಕೆಲವು ಜಿಲ್ಲೆಗಳ ನಿರ್ದೇಶಕರು, ‘ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳದ ಕಾರಣ ಸಮಾಜದವರು ಗೊಂದಲಕ್ಕೆ ಒಳಗಾಗಿದ್ದಾರೆ. ಹೋರಾಟದ ವಿಚಾರದಲ್ಲಿ ಎದುರಾಗಿರುವ ಗೊಂದಲಗಳನ್ನು ಸಂಘವು ಪರಿಹರಿಸಬೇಕು’ ಎಂದು ಕಾರ್ಯಕಾರಿಣಿ ಸಭೆಯಲ್ಲಿ ಆಗ್ರಹಿಸಿದ್ದಾರೆ.

‘ಸಿದ್ದರಾಮಯ್ಯ ಅವರು ಈ ಹೋರಾಟ ಬೆಂಬಲಿಸುವವರೆಗೂ ನಾವು ತಟಸ್ಥರಾಗುತ್ತೇವೆ’ ಎಂದು ನುಡಿದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು