ಬುಧವಾರ, ಡಿಸೆಂಬರ್ 2, 2020
23 °C

ತುಮಕೂರು: ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಬೆಳಗಾವಿ ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪೊಲೀಸರು ದೌರ್ಜನ್ಯದಿಂದ ಸ್ಥಳಾಂತರ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಕುರುಬರ ಸಂಘದಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್ ಮಾತನಾಡಿ, ‘ನಾಡು ಕಂಡ ಅಪ್ರತಿಮ ದೇಶಭಕ್ತ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಪೊಲೀಸರು ಏಕಾಏಕಿ ಸ್ಥಳಾಂತರ ಮಾಡಿದ್ದಾರೆ. ಇದನ್ನು ವಿರೋಧಿಸಿದ ಸಾರ್ವಜನಿಕರ ಮೇಲೆಯೂ ಹಲ್ಲೆ ಮಾಡಿದ್ದಾರೆ. ಇಂದು ರಾಯಣ್ಣ ಅವರಿಗೆ ಮಾಡಿದ ಅಪಮಾನ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರವಹಿಸಬೇಕಾಗಿದೆ. ಪ್ರತಿಮೆ ಸ್ಥಳಾಂತರ ಮಾಡುವಾಗ ಅಗೌರವ ತೋರಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಪೀರನವಾಡಿ ಗ್ರಾಮದಲ್ಲಿಯೇ ಪ್ರತಿಮೆಯನ್ನು ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕುರುಬರ ಸಂಘದ ಕಾರ್ಯಾಧ್ಯಕ್ಷ ರಾಜಣ್ಣ, ‘ಪ್ರತಿಮೆ ಸ್ಥಳಾಂತರಕ್ಕೆ ವಿರೋಧಿಸಿದ ಸ್ಥಳೀಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ರಾಯಣ್ಣ ಯಾವುದೇ ಒಂದು ಜಾತಿಗೆ ಸೀಮಿತರಲ್ಲ’ ಎಂದರು.

ಪ್ರತಿಮೆಯನ್ನು ಪುನರ್ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಹಿರಿಯ ಉಪಾಧ್ಯಕ್ಷ ಎಂ.ಪಿ.ಕುಮಾರಸ್ವಾಮಿ, ಪ್ರದೇಶ ಕುರುಬರ ಸಂಘದ ನಿರ್ದೇಶಕ ಟಿ.ಇ.ರಘುರಾಮ್, ಜಿಲ್ಲಾ ಖಜಾಂಚಿ ಧರ್ಮರಾಜ್, ಕೊರಟಗೆರೆ ಕುರುಬರ ಸಂಘದ ಅಧ್ಯಕ್ಷ ಮೈಲಾರಪ್ಪ, ಹಾಲುಮತ ಮಹಾಸಭಾ ಅಧ್ಯಕ್ಷ ಟಿ.ಎಂ.ಗರುಡಯ್ಯ, ಕನಕ ಯುವಸೇನೆಯ ಕೆಂಪರಾಜು, ಪಾಲಿಕೆ ಮಾಜಿ ಸದಸ್ಯ ಮೆಳೆಕೋಟೆ ರಮೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು