ತುಮಕೂರು: ರಾಜಕೀಯ ಪಕ್ಷಗಳ ವಿರುದ್ಧ ಸಿಡಿದೆದ್ದಿರುವ ಜಿಲ್ಲೆಯ ಕುರುಬ ಸಮುದಾಯದವರು, ‘ನಮ್ಮ ವೋಟು ಬೇಕಾದರೆ’ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.
ಕಾಳಿದಾಸ ವಿದ್ಯಾವರ್ಧಕ ಸಂಘ, ಕರ್ನಾಟಕ ಪ್ರದೇಶ ಕುರುಬರ ಸಂಘ, ಜಿಲ್ಲಾ ಕುರುಬರ ಸಂಘದ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖಂಡರಾದ ಮೈಲಪ್ಪ, ವೆಂಕಟೇಶ್‌ಮೂರ್ತಿ, ಸುರೇಶ್, ತಿಮ್ಮರಾಜು, ಮಹೇಶ್, ಪುಟ್ಟರಾಜು, ಮಲ್ಲಿಕಾರ್ಜುನ್ ಇತರರು ಸಮುದಾಯಕ್ಕೆ ಅವಕಾಶ ನೀಡುವ ರಾಜಕೀಯ ಪಕ್ಷವನ್ನು ಬೆಂಬಲಿಸುವುದಾಗಿ ಪ್ರಕಟಿಸಿದರು.
ಜಿಲ್ಲೆಯಲ್ಲಿ ಕುರುಬ ಸಮುದಾಯ 4.50 ಲಕ್ಷ ಜನಸಂಖ್ಯೆ ಇದೆ. ಜನಸಂಖ್ಯೆಯ ಲೆಕ್ಕಾಚಾರದಲ್ಲಿ ಮೂರನೇ ಸ್ಥಾನದಲ್ಲಿ ಸಮಾಜ ಇದೆ. ಎರಡು–ಮೂರು ಕ್ಷೇತ್ರಗಳಲ್ಲಿ ಸಮುದಾಯದ ಅಭ್ಯರ್ಥಿಗಳು ಗೆಲ್ಲುವ ಅವಕಾಶಗಳಿವೆ. ತಿಪಟೂರು, ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ತಾಲ್ಲೂಕಿನಲ್ಲಿ ಕುರುಬರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಕ್ಷೇತ್ರಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅವಕಾಶ ಮಾಡಿಕೊಡಬೇಕು. ಜನಸಂಖ್ಯೆ ಆಧಾರದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂದು ಆಗ್ರಹಿಸಿದರು.
ಹಿಂದೆ ತುಮಕೂರು, ಶಿರಾ, ಚಿಕ್ಕನಾಯಕನಹಳ್ಳಿ ಕ್ಷೇತ್ರಗಳಲ್ಲಿ ಕುರುಬ ಸಮಾಜದವರು ಆಯ್ಕೆ ಆಗಿದ್ದರು. ಕೆ. ಲಕ್ಕಪ್ಪ, ಸಿ.ಎನ್. ಭಾಸ್ಕರಪ್ಪ ಸಂಸದರಾಗಿದ್ದರು. ಆದರೆ, ಕಳೆದ 10–15 ವರ್ಷಗಳಿಂದ ಜಿಲ್ಲೆಯಲ್ಲಿ ಅವಕಾಶ ನೀಡದೆ, ಕೇವಲ ವೋಟ್ ಬ್ಯಾಂಕ್ ಮಾಡಿಕೊಳ್ಳಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸಿ.ಬಿ. ಸುರೇಶ್‌ಬಾಬು ಅವರಿಗೆ ಜೆಡಿಎಸ್ ಪಕ್ಷ ಟಿಕೆಟ್ ನೀಡಿದೆ. ಇತರೆ ಪಕ್ಷದವರು ನಮ್ಮ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಕುರುಬರಿಗೆ ಪ್ರಾತಿನಿಧ್ಯ ಕೊಡುವ ಪಕ್ಷವನ್ನು ಬೆಂಬಲಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ತುಮಕೂರು ನಗರದಲ್ಲಿ ಬಿಜೆಪಿಯಿಂದ ಡಾ.ಎಂ.ಆರ್. ಹುಲಿನಾಯ್ಕರ್, ಶಿರಾದಲ್ಲಿ ಬಿ.ಕೆ. ಮಂಜುನಾಥ್ ಅವರಿಗೆ ಟಿಕೆಟ್ ನೀಡಬೇಕು. ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳೂ ನಮ್ಮ ಸಮುದಾಯವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.