ಸೋಮವಾರ, ಆಗಸ್ಟ್ 2, 2021
28 °C
ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಭೂ ಸ್ವಾಧೀನ– ಸಿ.ಎಂ ಜತೆ ಚರ್ಚಿಸಿ ನಿರ್ಧಾರ– ಸಚಿವ ಜೆ.ಸಿ.ಮಾಧುಸ್ವಾಮಿ

ಭೂ ಪರಿಹಾರ: ಇನ್ನೂ ತೂಗುಯ್ಯಾಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಎತ್ತಿನಹೊಳೆ ಯೋಜನೆಯಲ್ಲಿ ಬೈರಗೊಂಡ್ಲು ಬಳಿ ಜಲಾಶಯ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಸೂಕ್ತ ಪರಿಹಾರ ನಿಗದಿಪಡಿಸುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ಬೈರಗೊಂಡ್ಲು ಜಲಾಶಯ ಭೂಸ್ವಾಧೀನ ಸಂಬಂಧ ಮಂಗಳವಾರ ನಡೆದ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದರು.

‘ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರ ಜಮೀನು ಭೂಸ್ವಾಧೀನವಾಗಲಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರಿಗೆ ಪ್ರತಿ ಎಕರೆಗೆ ₹32 ಲಕ್ಷ ಪರಿಹಾರ ನೀಡುತ್ತಿದ್ದು, ಅದೇ ಮಾದರಿಯಲ್ಲಿ ಕೊರಟಗೆರೆ ತಾಲ್ಲೂಕಿನ ರೈತರಿಗೂ ಪರಿಹಾರ ಕೊಡಬೇಕು ಎನ್ನುವುದು ನನ್ನ ಆಶಯವಾಗಿದೆ’ ಎಂದರು.

ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್, ‘ಕಳೆದ ಸರ್ಕಾರದಲ್ಲಿ ಎತ್ತಿನಹೊಳೆ ಯೋಜನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಭೂಪರಿಹಾರ ದರವನ್ನು ನಿಗದಿಪಡಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಲು ತೀರ್ಮಾನಿಸಲಾಗಿತ್ತು. ಜಲಾಶಯ ನಿರ್ಮಾಣದಿಂದ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಜನಪ್ರತಿನಿಧಿಗಳು ರೈತರ ಮನವೊಲಿಸಿದ್ದರು. ಇದರಿಂದಾಗಿ ಭೂಮಿ ಬಿಟ್ಟುಕೊಡಲು ರೈತರು ಒಪ್ಪಿಕೊಂಡಿದ್ದರು. ಸೂಕ್ತ ದರ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.

ಸಂಸದ ಜಿ.ಎಸ್.ಬಸವರಾಜ್, ‘ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರಿಗೆ ಸಿಗುವ ಭೂ ಪರಿಹಾರದ ಮಾದರಿಯಲ್ಲೇ ಕೊರಟಗೆರೆ ತಾಲ್ಲೂಕಿನ ರೈತರಿಗೂ ಸಿಗಬೇಕು. ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಸೂಕ್ತ ಬೆಲೆ ದೊರಕಿಸಿಕೊಡಲಾಗುವುದು’ ಎಂದು ಹೇಳಿದರು.

ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಚಂದ್ರಶೇಖರ್, ಶೇಖರ್, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ನಿರ್ದೇಶ ಜಯಪ್ರಕಾಶ್ ಇದ್ದರು.

ಎಕರೆಗೆ ₹32 ಲಕ್ಷ ಬೇಡಿಕೆ
‘ಬೈರಗೊಂಡ್ಲು ಬಳಿ ಜಲಾಶಯ ನಿರ್ಮಾಣವಾದರೆ ಸುತ್ತಮುತ್ತಲಿನ 5 ಹಳ್ಳಿಗಳು ಮುಳುಗಡೆಯಾಗಿ ಸ್ಥಳಾಂತರಗೊಳ್ಳಲಿವೆ. ಹೆಚ್ಚುವರಿಯಾಗಿ ₹350 ಕೋಟಿ ಭೂ ಪರಿಹಾರ ನಮ್ಮ ಭಾಗದ ರೈತರಿಗೆ ದೊರೆಯಬೇಕು. ಪ್ರತಿ ಎಕರೆಗೆ ₹32 ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಮನವೊಲಿಸಬೇಕು’ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಸಚಿವರಿಗೆ ಮನವಿ ಮಾಡಿದರು.

ಬೈರಗೊಂಡ್ಲು ಸುತ್ತಮುತ್ತಲಿನ ಗ್ರಾಮಗಳ ರಸ್ತೆ, ಚರಂಡಿ, ಮತ್ತಿತರ ಕಾಮಗಾರಿಗಳಿಗೆ ₹150 ಕೋಟಿ ಮಂಜೂರಾತಿ ನೀಡಿದ್ದು, ಮೊದಲ ಹಂತದಲ್ಲಿ ₹50 ಕೋಟಿ ಬಿಡುಗಡೆಯಾಗಿದೆ. ಇನ್ನುಳಿದ ₹100 ಕೋಟಿ ಬಿಡುಗಡೆ ಮಾಡಿ ಅಭಿವೃದ್ಧಿ ಕಾಮಗಾರಿ ಮುಂದುವರೆಸಬೇಕು ಒತ್ತಾಯಿಸಿದರು.

ರೈತರಿಗೆ ನೋಟಿಸ್ ಕೊಡಿ: ಸಚಿವ
ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನವಾಗುವ ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ ತಾಲ್ಲೂಕು ಸೇರಿದಂತೆ ಇತರೆಡೆ ರೈತರಿಗೆ ನೋಟಿಸ್ ನೀಡಿಲ್ಲ. ನಿಯಮಾನುಸಾರ ರೈತರಿಗೆ ಭೂ ಪರಿಹಾರ ನೀಡುವುದು ತಡವಾದರೂ ಸಹ ಮೊದಲು ನೋಟಿಸ್ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು