ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್– ಮಾಗಡಿ ಹೇಮಾವತಿ ಲಿಂಕ್ ಕೆನಾಲ್‌ ಯೋಜನೆಗೆ ಹಣ ನೀಡದೆ ಕಾಮಗಾರಿಗೆ ಚಾಲನೆ

Published 2 ಮಾರ್ಚ್ 2024, 4:59 IST
Last Updated 2 ಮಾರ್ಚ್ 2024, 4:59 IST
ಅಕ್ಷರ ಗಾತ್ರ

ತುಮಕೂರು: ಕುಣಿಗಲ್– ಮಾಗಡಿ ಹೇಮಾವತಿ ಲಿಂಕ್ ಕೆನಾಲ್ ಯೋಜನೆಗೆ ಹಣ ಮೀಸಲಿಡದೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಇಲ್ಲಿ ಶುಕ್ರವಾರ ಆರೋಪಿಸಿದರು.

ಜಿಲ್ಲೆಗೆ ಸಮರ್ಪಕವಾಗಿ ಹೇಮಾವತಿ ನೀರು ಹರಿದು ಬರುತ್ತಿಲ್ಲ. ನಿಗದಿಪಡಿಸಿದಷ್ಟು ನೀರು ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪೈಪ್‌ಲೈನ್ ಮೂಲಕ ರಾಮನಗರ ಜಿಲ್ಲೆಗೆ ನೀರು ತೆಗೆದುಕೊಂಡು ಹೋಗುವ ಪ್ರಯತ್ನ ನಡೆದಿದೆ. ಜಿಲ್ಲೆಯಿಂದ ನೀರು ತೆಗೆದುಕೊಂಡು ಹೋಗುವ ಬದಲು ಮೇಕೆದಾಟು ಯೋಜನೆಯಲ್ಲಿ ನೀರು ತರಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.

ಮೇಕೆದಾಟು ಬಳಿ ಜಲಾಶಯ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದರು. ಆದರೆ ಅಧಿಕಾರಕ್ಕೆ ಬಂದ ನಂತರ ಆ ಬಗ್ಗೆ ಬಾಯಿ ಬಿಡುತ್ತಿಲ್ಲ. ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿಲ್ಲ. ಮೇಕೆದಾಟು ಜಲಾಶಯ ನಿರ್ಮಿಸುವ ಉದ್ದೇಶ ಇದ್ದರೆ ಹಣ ಕೊಡಬೇಕಿತ್ತು. ಅನುದಾನ ಕೊಡಿಸುವುದು ಬಿಟ್ಟು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಹಣ ಕೊಡದೆ ನೀರಾವರಿ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಕೇವಲ ಚುನಾವಣೆ ಗಿಮಿಕ್. ಜನರನ್ನು ಮರುಳು ಮಾಡುತ್ತಿದ್ದಾರೆ. ಹಣವಿಲ್ಲದೆ ಕೆಲಸ ಸಾಧ್ಯವೆ ಎಂದು ಪ್ರಶ್ನಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ‘ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಬಂಧಿಸಿರುವ ಪಕ್ಷದ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಮತ್ತೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಹೇಳಿದರು.

‘ನಮ್ಮ ಪ್ರತಿಭಟನೆ ಪೊಲೀಸರ ವಿರುದ್ಧವಲ್ಲ. ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ಪೊಲೀಸರಿಗೆ ಗಾಯವಾಗಿದೆ. ಅದನ್ನೇ ಉದ್ದೇಶವಾಗಿ ಇಟ್ಟುಕೊಂಡು ಬಂಧಿಸಲಾಗಿದೆ. ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT