ಸೋಂಕು ತಗ್ಗಿದರೆ ಲಾಕ್ಡೌನ್ ತೆರವು
ತುಮಕೂರು: ಮುಂದಿನ ಒಂದು ವಾರದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್ಡೌನ್ ತೆರವುಗೊಳಿ
ಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿ ಮಾತನಾಡಿ, ‘ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ನಿರೀಕ್ಷೆಯಂತೆ ಕೋವಿಡ್ ನಿಯಂತ್ರಣಕ್ಕೆ ಬಂದಿಲ್ಲ. ಕೆಂಪು ವಲಯ, ಹಾಟ್ಸ್ಪಾಟ್ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ತೆರವಿಗೆ ಕ್ರಮವಹಿಸಲಾಗುವುದು’ ಎಂದರು.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳದಿಂದಾಗಿ ಶಿರಾ ತಾಲ್ಲೂಕು ಸೇರಿದಂತೆ ಕೆಲವು ಭಾಗಗಳನ್ನು ಕೆಂಪು ವಲಯ, ಹಾಟ್ಸ್ಪಾಟ್ ಪ್ರದೇಶಗಳನ್ನಾಗಿ ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ತರಬೇಕು. ಸೋಂಕಿತರ ಸಂಪರ್ಕಿತರು, ಕುಟುಂಬಸ್ಥರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸ
ಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆ
ಯರನ್ನು ಬಳಸಿಕೊಂಡು ಕೋವಿಡ್ ಸೋಂಕಿತರ ಆರೋಗ್ಯದ ಬಗ್ಗೆ ಸದಾ ಗಮನಹರಿಸುವಂತೆ ನಿರ್ದೇಶಿಸಿದರು.
ನೋಡಲ್ ಅಧಿಕಾರಿ ಡಾ.ಕೇಶವ
ರಾಜ್, ‘ಜಿಲ್ಲೆಗೆ ಪೂರೈಕೆಯಾಗುತ್ತಿರುವ ಲಸಿಕೆಯನ್ನು ತಾಲ್ಲೂಕುವಾರು ಜನಸಂಖ್ಯೆಗೆ ಅನುಗುಣವಾಗಿ ವಿತರಿಸಿ ಲಸಿಕೆ ಹಾಕಲಾಗುತ್ತಿದೆ. ಯಾವುದೇ ಸಮಸ್ಯೆಯಾಗದಂತೆ ಲಸಿಕಾ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಲಸಿಕೆ ಪೂರೈಕೆಯಾಗುವ ಸಾಧ್ಯತೆಯಿದೆ. ಹೆಚ್ಚು ಲಸಿಕೆ ಬಂದ ತಕ್ಷಣ ಎಲ್ಲಾ ವರ್ಗದವರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಬಾಬು, ‘ಜಿಲ್ಲೆಯಲ್ಲಿ ಪತ್ತೆಯಾಗಿರುವ ಕಪ್ಪು ಶಿಲೀಂಧ್ರದ ರೋಗಿಗಳಿಗೆ ಸೂಕ್ತವಾಗಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಇದಕ್ಕೆ ಚಿಕಿತ್ಸೆ ನೀಡಲು ಜಿಲ್ಲೆಗೆ ಹೆಚ್ಚಿನ ಔಷಧಗಳ ಅವಶ್ಯಕವಿದೆ ಇದೆ’ ಎಂದು ಹೇಳಿದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.