ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ, ಪಾಲಿಕೆ ಚುನಾವಣೆಗೆ ಸಜ್ಜಾಗಿ

ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ವಿಧಾನಸಭೆ ಚುನಾವಣೆ ಸೋಲಿನ ಕುರಿತು ಆತ್ಮಾವಲೋಕನ
Last Updated 4 ಜುಲೈ 2018, 17:39 IST
ಅಕ್ಷರ ಗಾತ್ರ

ತುಮಕೂರು: ಮುಂಬರುವ ಲೋಕಸಭೆ ಮತ್ತು ಮಹಾನಗರ ಪಾಲಿಕೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕು ಎಂದು ಬುಧವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮುಖಂಡರು ಕಾರ್ಯಕರ್ತರಿಗೆ ಸೂಚಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿ.ವೇಣುಗೋಪಾಲ್ ಮಾತನಾಡಿ, ‘ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಜಿ.ಪರಮೇಶ್ವರ ಅವರು ದೇವರಾಜ ಅರಸು ಅವರಂತೆಯೇ ಉತ್ತಮ ಆಡಳಿತ ನೀಡಿದರು. ಆದರೂ ಜನರು ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸಲಿಲ್ಲ. ಇದಕ್ಕೆ ಕಾರಣ ತಿಳಿದು ಬಂದಿಲ್ಲ’ ಎಂದರು.

‘ಜಿಲ್ಲಾ ವ್ಯಾಪ್ತಿಯಲ್ಲಿ ತುಮಕೂರು, ಚಿತ್ರದುರ್ಗ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳು ಬರುತ್ತವೆ. ಈ ಮೂರು ಕ್ಷೇತ್ರಗಳಲ್ಲಿ ಪಕ್ಷದ ಹಾಲಿ ಸಂಸದರನ್ನು ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕು’ ಎಂದು ನುಡಿದರು. ‘ಮುಂದಿನ ಸಂಸತ್ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಪಕ್ಷದಿಂದ ಎಸ್‌.ಪಿ.ಮುದ್ದಹನುಮೇಗೌಡ ಅವರು ಸ್ಪರ್ಧಿಸುವರು. ಈ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಬೇಡ’ ಎಂದರು. ‘ಜೆಡಿಎಸ್ ನಮ್ಮ ಬದ್ಧ ವೈರಿ ಆಗಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಜತೆ ಕೈ ಜೋಡಿಸಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಎದೆಗುಂದಬಾರದು’ ಎಂದು ಹೇಳಿದರು.

ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಮಾತನಾಡಿ, ‘ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ನಾನೇ ವಹಿಸಿಕೊಂಡಿದ್ದೆ. ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮೂರು ಸ್ಥಾನಗಳಲ್ಲಿ ಮಾತ್ರ ಗೆದ್ದಿರುವುದು ಬೇಸರ ತಂದಿದೆ. ಆದರೆ ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ’ ಎಂದು ಹೇಳಿದರು.

‘ಪಕ್ಷದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸ್ಥಾನ ಮಾನ ದೊರೆಯಲಿದೆ. ನಿಗಮ ಮಂಡಳಿಗಳ ನೇಮಕದಲ್ಲಿ ಜಿಲ್ಲೆಗೆ ಹೆಚ್ಚಿನ ಸ್ಥಾನ ನೀಡಲು ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದರು.

ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ಕೆಂಚಮಾರಯ್ಯ, ‘ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಪಾಲಿಕೆ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದರು.

ಸಂಸದ ಎಸ್‌.ಪಿ.ಮುದ್ದ‌ಹನುಮೇಗೌಡ, ಕೆಪಿಸಿಸಿ ಉಪಾಧ್ಯಕ್ಷ ರಾಧಾಕೃಷ್ಣ, ಮಾಜಿ ಶಾಸಕರಾದ ಕೆ.ಷಡಕ್ಷರಿ, ಆರ್.ನಾರಾಯಣ್, ಷಫಿ ಅಹಮ್ಮದ್, ಅಫ್ತಾಬ್ ಅಹಮ್ಮದ್, ಮರಿಚನ್ನಮ್ಮ, ಲಿಂಗರಾಜು, ತೂಬಿ ಮಲ್ಲೇಶ್, ಜಿಲ್ಲಾ ವಕ್ತಾರ ರಾಜೇಶ್ ದೊಡ್ಮನೆ ಇದ್ದರು.

ಅಭಿವೃದ್ಧಿ ಮಾಡಿದರೂ ಸೋಲು

‘ಶಿರಾ ಕ್ಷೇತ್ರದಲ್ಲಿ ನಾನು ಅಪಾರ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೂ ಪರಾಭವ ಅನುಭವಿಸಿದೆ’ ಎಂದು ಟಿ.ಬಿ.ಜಯಚಂದ್ರ ನುಡಿದರು.‘ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ಮುಂದಿನ ದಿನಗಳಲ್ಲಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುವೆ. ಎಲ್ಲ ಚುನಾವಣೆಗಳಲ್ಲಿ ಗೆಲ್ಲುವ ರೀತಿ ಕೆಲಸ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT