ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ

ಮಹಿಳೆಯರ ಸಂರಕ್ಷಣಾ ಕಾಯ್ದೆ ಸೇರಿದಂತೆ ವಿವಿಧ ಯೋಜನೆ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಆದೇಶ
Last Updated 9 ಮೇ 2019, 9:05 IST
ಅಕ್ಷರ ಗಾತ್ರ

ತುಮಕೂರು: ‘ಬಾಲ್ಯ ವಿವಾಹ ತಡೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ನಿಷೇಧ, ಮತ್ತಿತರ ಕಾಯ್ದೆ ಹಾಗೂ ಮಹಿಳಾ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಸಮುದಾಯಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘2018–19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 45 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 13 ಪ್ರಕರಣಗಳಲ್ಲಿ ಬಾಲ್ಯ ವಿವಾಹಗಳು ಜರುಗಿದ್ದು, ಸಂಬಂಧಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಾಗ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಪೊಲೀಸರ ಸಹಕಾರ ಪಡೆದು ಬಾಲ್ಯ ವಿವಾಹ ತಡೆಗಟ್ಟಬೇಕು. ಮಾಹಿತಿ ನೀಡುವ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಬೇಕು’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ತಡೆಯಲಾದ 45 ಬಾಲ್ಯ ವಿವಾಹ ಕುರಿತು ಪ್ರಕರಣಗಳ ಕಾರಣವನ್ನು ಪತ್ತೆ ಹಚ್ಚಿ ಮುಂದಿನ ಸಭೆಯಲ್ಲಿ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.

‘ಜಿಲ್ಲೆಯಲ್ಲಿ 1463 ಲಿಂಗತ್ವ ಅಲ್ಪಸಂಖ್ಯಾತರು ಇದ್ದು, ಎಲ್ಲ ಇಲಾಖೆಗಳ ಅಭಿವೃದ್ಧಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕು. ಇದಕ್ಕಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕೋಶ ರಚಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ವಿವಿಧ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ವಯಂ ಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT