ಭಾನುವಾರ, ಮಾರ್ಚ್ 29, 2020
19 °C
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಕಾರ್ಯದರ್ಶಿ ಪರಮೇಶ್ವರನ್‌ ಅಯ್ಯರ್‌

‘6 ವಾರದಲ್ಲಿ ಶೌಚಾಲಯ ನಿರ್ಮಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: 2012ರಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ ಶೌಚಾಲಯ ರಹಿತ ಕುಟುಂಬಗಳಿಗೆ ಮುಂದಿನ 6 ವಾರಗಳ ಒಳಗಾಗಿ ಶೌಚಾಲಯಗಳನ್ನು ನಿರ್ಮಿಸಿಕೊಡುವಂತೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯದರ್ಶಿ ಪರಮೇಶ್ವರನ್‌ ಅಯ್ಯರ್‌ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ‘10 ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಂಗಳವಾರ ಆಯೋಜಿಸಿದ್ದ ಸಭೆ’ಯಲ್ಲಿ ಮಾತನಾಡಿದರು.

ಬಯಲು ಬಹಿರ್ದೆಸೆ ಮುಕ್ತ ದೇಶವಾಗಿಸಲು ಕೇಂದ್ರವು ಸ್ವಚ್ಛ ಭಾರತ್ ಮಿಷನ್ ಯೋಜನೆ ರೂಪಿಸಿದೆ. ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ಅನುಷ್ಠಾನಕ್ಕಾಗಿ (2ನೇ ಹಂತ) ₹1.4 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಪ್ರಮಾಣದಲ್ಲಿ ಶೇ 40ರಷ್ಟು ಮಾತ್ರ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದನ್ನು 5 ವರ್ಷಗಳೊಳಗೆ ಶೇ 100ರಷ್ಟು ಪ್ರಮಾಣಕ್ಕೆ ತರುವ ಉದ್ದೇಶವಿದೆ. ಇದಕ್ಕಾಗಿ ಜಲ್ ಜೀವನ್ ಮಿಷನ್ ರೂಪಿಸಲಾಗಿದೆ. ಇದರಡಿ ನೀರಿನ ಮೂಲಗಳ ಮರುಪೂರಣ ಮತ್ತು ಮಳೆ ನೀರು ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಅಯ್ಯರ್ ಹೇಳಿದರು.

ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಆರ್.ವಿಶಾಲ್, ‘ವೈಯಕ್ತಿಕ ಶೌಚಾಲಯ ನಿರ್ಮಾಣ ಕಾರ್ಯದ ನಿಗದಿತ ಗುರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಮುಂದಿನ ವರ್ಷ ಜನಗಣತಿ ನಡೆಯಲಿದೆ. ಅಷ್ಟರೊಳಗೆ ಎಲ್ಲ ಮನೆಗಳಲ್ಲಿ ಶೌಚಾಲಯಗಳು ನಿರ್ಮಾಣ ಆಗುವಂತೆ ಕ್ರಮ ವಹಿಸಬೇಕು’ ಎಂದರು.

ತುಮಕೂರು ಜಿಲ್ಲೆಯಲ್ಲಿ ಸಮೀಕ್ಷೆ ಪ್ರಕಾರ 10,566 ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ ಶೇ 98ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿ.ಪಂ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತಿ ತಾಲ್ಲೂಕಿನಲ್ಲಿ 10 ಸಮುದಾಯ ಶೌಚಾಲಯ

ತುಮಕೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಪ್ರತಿ ತಾಲ್ಲೂಕಿಗೆ ತಲಾ 10ರಂತೆ 100 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಮೊದಲ ಹಂತದಲ್ಲಿ (ಪ್ರತಿ ಘಟಕಕ್ಕೆ ₹1.80 ಲಕ್ಷ ಅಂದಾಜು ವೆಚ್ಚದಂತೆ) ₹90ಲಕ್ಷ ಅನುದಾನ ಬಿಡುಗಡೆಯಾಗಿದೆ. ಉಳಿದಂತೆ ಅಗತ್ಯವಿರುವ ₹ 90 ಲಕ್ಷಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.

ಘನತ್ಯಾಜ್ಯ ಘಟಕ ನಿರ್ವಹಣೆಗಾಗಿ ಜಿಲ್ಲೆಯಲ್ಲಿ 50 ಘಟಕಗಳನ್ನು ನಿರ್ಮಿಸಲಾಗುತ್ತಿದೆ. 44 ಘಟಕಗಳ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರೆತಿದೆ. ಇದಕ್ಕಾಘಿ ₹ 4.35ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಸದ್ಯ 25 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಕಸ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ಶುಭಾ ಕಲ್ಯಾಣ್ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)