ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಕುಡಿಯುವ ನೀರಿಗೆ ಶಾಸಕರ ಬೇಡಿಕೆ

Published 5 ಮಾರ್ಚ್ 2024, 4:18 IST
Last Updated 5 ಮಾರ್ಚ್ 2024, 4:18 IST
ಅಕ್ಷರ ಗಾತ್ರ

ತುಮಕೂರು: ಬರ ಹಾಗೂ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು ಕುಡಿಯುವ ನೀರಿಗೆ ಎಲ್ಲೆಡೆ ಹಾಹಾಕಾರ ಉಂಟಾಗಿದ್ದು, ತಕ್ಷಣ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಒತ್ತಾಯಿಸಿದರು.

ಶಾಸಕ ಅಧ್ಯಕ್ಷತೆಯ ಕಾರ್ಯಪಡೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ತಕ್ಷಣ ಜಾರಿ ಮಾಡಬೇಕು. ಬೇಡಿಕೆ ಇರುವ ಕಡೆಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಿ ನೀರು ಕೊಡಬೇಕು ಎಂದು ಆಗ್ರಹಿಸಿದರು.

ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಲ್ಲಿ ಕೊಳವೆ ಬಾವಿ ಕೊರೆಸಿ ನೀರು ಪೂರೈಸುವ ಬಗ್ಗೆ ಸುಧೀರ್ಘವಾಗಿ ಚರ್ಚೆಗಳು ನಡೆದವು. ಪರ– ವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಯಿತು. ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಜೆಜೆಎಂ ಯೋಜನೆಯ ಅನುಷ್ಠಾನ ವಿಳಂಬವಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಒಂದು ಹಂತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹಾಗೂ ಸರ್ಕಾರದ ವಿರುದ್ಧವೇ ಜಯಚಂದ್ರ ಅಸಮಾಧಾನ ಹೊರ ಹಾಕಿದರು. ‘ಬರ ನಿರ್ವಹಣೆ, ಕುಡಿಯುವ ನೀರಿಗೆ ಕೊಡುತ್ತಿರುವ ಹಣ ಸಾಲದಾಗಿದೆ. ಪ್ರತಿ ದಿನವೂ ಜನರಿಂದ ಮಾತು ಕೇಳಬೇಕಾಗಿದೆ. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಗುಡುಗಿದರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಹ ಧ್ವನಿಗೂಡಿಸಿದರು. ಜೆಜೆಎಂನಲ್ಲಿ ನಡೆದಿರುವ ಅವ್ಯವಹಾರ, ಕಾಮಗಾರಿ ವಿಳಂಬದ ಬಗ್ಗೆ ಶಾಸಕರು ಪ್ರಸ್ತಾಪಿಸಿದರು. ಕೊನೆಗೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ಹೇಳಿದ ಪರಮೇಶ್ವರ ಅವರು ಚರ್ಚೆಗೆ ತೆರೆ ಎಳೆದರು.

ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಪಡೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ತಕ್ಷಣ ಜಿಲ್ಲಾಧಿಕಾರಿಗೆ ತಹಶೀಲ್ದಾರರು ಕಳುಹಿಸಬೇಕು. ಜಿಲ್ಲಾಧಿಕಾರಿ ಒಪ್ಪಿಗೆ ಸಿಕ್ಕ ತಕ್ಷಣ ಕೆಲಸ ಆರಂಭಿಸಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸುವಂತೆ ಸಚಿವರು ಸೂಚಿಸಿದರು.

72 ಹಳ್ಳಿಗಳಲ್ಲಿ ಸಮಸ್ಯೆ: ಜಿಲ್ಲೆಯ 72 ಗ್ರಾಮಗಳಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಹೊಸದಾಗಿ 48 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. 6 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 14 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ, 2 ಹಳ್ಳಿಗೆ ಪಕ್ಕದ ಗ್ರಾಮದಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜೆಜೆಎಂನಲ್ಲಿ ಹೆಚ್ಚುವರಿಯಾಗಿ 1,231 ಕೊಳವೆ ಬಾವಿಗಳನ್ನು ಕೊರೆಸಲು ಯೋಜನೆ ರೂಪಿಸಿಕೊಂಡಿದ್ದು, ಈವರೆಗೆ 300 ಬೋರ್‌ವೆಲ್ ಕೊರೆಸಲಾಗಿದೆ. ಉಳಿದ 931 ಕೊಳವೆ ಬಾವಿಗಳನ್ನು ಸಮಸ್ಯೆ ಕಾಣಿಸಿಕೊಂಡ ಗ್ರಾಮಗಳಲ್ಲಿ ಕೊರೆಸಲಾಗುವುದು. ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ₹20 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಈ ಹಣವನ್ನೂ ಕುಡಿಯುವ ನೀರಿನ ಕೆಲಸಗಳಿಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿ.ಪಂ ಸಿಇಒ ಜಿ.ಪ್ರಭು ಅವರು ನರೇಗಾ ಯೋಜನೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು.

ಮೇವು ಬ್ಯಾಂಕ್

ತುಮಕೂರು: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ತಾಲ್ಲೂಕಿಗೆ ಒಂದು ‘ಮೇವು ಬ್ಯಾಂಕ್’ ತೆರೆಯಲಾಗುವುದು ಎಂದು ಸಚಿವ ಜಿ.ಪರಮೇಶ್ವರ ತಿಳಿಸಿದರು. ಬೇಡಿಕೆ ನೋಡಿಕೊಂಡು ಪ್ರತಿ ತಾಲ್ಲೂಕಿನಲ್ಲೂ ಮೇವು ಬ್ಯಾಂಕ್ ಆರಂಭಿಸಲಾಗುವುದು. ಜಾನುವಾರುಗಳಿಗೆ ಕುಸಿಯುವ ನೀರು ಒದಗಿಸಲು ಹಳ್ಳಿಗಳಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು. ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಇರುವೆಡೆ ಚೆಕ್ ಡ್ಯಾಂಗಳನ್ನು ನಿರ್ಮಿಸಿ ನೀರು ತುಂಬಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT