ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ಕಸ ವಿಲೇವಾರಿಗೆ ನಿರ್ಲಕ್ಷ್ಯ

Last Updated 3 ಮಾರ್ಚ್ 2023, 4:57 IST
ಅಕ್ಷರ ಗಾತ್ರ

ಗುಬ್ಬಿ: ಪಟ್ಟಣ ಹೊರವಲಯದ ಚೇಳೂರು ರಸ್ತೆಯಲ್ಲಿರುವ ಪಟ್ಟಣ ಪಂಚಾಯಿತಿಯ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸುರಿಯುತ್ತಿರುವ ಕಸದ ವಿಲೇವಾರಿಗೆ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬೇರೆಡೆಗೆ ಘಟಕ ಸ್ಥಳಾಂತರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಕಸ ವಿಲೇವಾರಿ ಘಟಕದ ಮುಂಭಾಗ ಪ್ರತಿಭಟನೆ ನಡೆಯಿತು.

ಮುಖಂಡ ವಿಜಯಕುಮಾರ್ ಮಾತನಾಡಿ, ‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸ ವಿಲೇವಾರಿ ಘಟಕದ ಸುತ್ತಮುತ್ತ ದುರ್ವಾಸನೆ ಹೆಚ್ಚಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಖರೀದಿಸಿರುವ ಯಂತ್ರಗಳನ್ನು ಜೋಡಿಸದೆ ತುಕ್ಕು ಹಿಡಿಯುತ್ತಿವೆ. ಅಧಿಕಾರಿಗಳು ಅಗತ್ಯವಿರುವ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವುದು ದುರದೃಷ್ಟಕರ ಎಂದು ದೂರಿದರು.

ಕರುನಾಡ ವಿಜಯ ಸೇನೆಯ ವಿನಯ್ ಮಾತನಾಡಿ, ಘಟಕದ ಅವ್ಯವಸ್ಥೆ ಬಗ್ಗೆ ದೂರು ನೀಡಿದರೆ ಅಧಿಕಾರಿಗಳು ರಾಜಕಾರಣಿಗಳಂತೆ ಆಶ್ವಾಸನೆ ಕೊಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಘಟಕ ನಿರ್ಮಾಣವಾಗಿ 10 ವರ್ಷ ಕಳೆದಿದ್ದರೂ ಇದುವರೆಗೂ ವಿದ್ಯುತ್ ಸಂಪರ್ಕ ಪಡೆದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿಗೆ ನಿದರ್ಶನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಪ್ರಿಯಾರಾಜು ಮಾತನಾಡಿ, ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಪರಿಸರ ದುರ್ವಾಸನೆಯಿಂದ ಕೂಡಿದ್ದು ಅನಾರೋಗ್ಯ ಹೆಚ್ಚಾಗುತ್ತಿದೆ. ಸಂಬಂಧಿಸಿದ ಮೇಲಧಿಕಾರಿಗಳು ಸ್ಥಳಕ್ಕೆ ಬಂದು ಪರಿಹಾರ ಒದಗಿಸುವವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದರು.

‘ಕಸ ವಿಲೇವಾರಿ ಘಟಕದಲ್ಲಿ ಅನೇಕ ನ್ಯೂನತೆ ಇರುವುದು ಸತ್ಯ. ಈಗಾಗಲೇ ವಿದ್ಯುತ್ ಸಂಪರ್ಕ ಪಡೆಯಲು ಟೆಂಡರ್ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಘಟಕಕ್ಕೆ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯ ಒದಗಿಸಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ತಿಳಿಸಿದರು.

ಪ್ರತಿಭಟನೆಯಲ್ಲಿ ಕರುನಾಡ ವಿಜಯ ಸೇನೆಯ ಮಧು, ವಾಸು ಅರಸ್, ಸುರೇಶ್, ಸೈಯದ್ ಪಾಷಾ, ಚಲೇನ್, ರಹೀಂ, ಹರಿಕೇಶವ, ಮೊಹಮ್ಮದ್ ಗೌಸ್, ಲಾವಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT