ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಸೂಚನೆ

Last Updated 19 ಸೆಪ್ಟೆಂಬರ್ 2021, 4:32 IST
ಅಕ್ಷರ ಗಾತ್ರ

ತುಮಕೂರು: ಮಹಿಳೆಯರು, ಮಕ್ಕಳ ಮೇಲೆ ಯಾವುದೇ ದೌರ್ಜನ್ಯಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ವಯಂ ರಕ್ಷಣೆ ಕುರಿತು ಮಾರ್ಗದರ್ಶನ ನೀಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಎಸ್.ಕುಂದರ್ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು.

ಮಹಿಳಾ ಕಾರ್ಯಕ್ರಮಗಳು ಹಾಗೂ ಕುಂದುಕೊರತೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಶನಿವಾರ ಮಾತನಾಡಿದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ತಡೆಗಟ್ಟಲು ಜಿಲ್ಲಾ ಮಟ್ಟದ ಆಂತರಿಕ ದೂರು ಸಮಿತಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹತ್ತು ಮಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಆಂತರಿಕ ದೂರು ಸಮಿತಿ ರಚಿಸಿ, ದೌರ್ಜನ್ಯ ತಡೆ ಬಗ್ಗೆ ಅರಿವು ಮೂಡಿಸಬೇಕು. ಆಂತರಿಕ ದೂರು ಸಮಿತಿ ಕೆಲಸ, ಜವಾಬ್ದಾರಿಗಳ ಬಗ್ಗೆ ಸದಸ್ಯರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಯಾವುದೇ ರೀತಿಯ ಆರೋಗ್ಯ ರಕ್ಷಣಾ ಕಾರ್ಯಕ್ರಮ ರೂಪಿಸಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಮಹಿಳೆಯರು, ಮಕ್ಕಳು ಶೌಚಾಲಯ ಬಳಸದೆ ಬಯಲು ಬಹಿರ್ದೆಸೆಯನ್ನೇ ಅವಲಂಬಿಸಿದ್ದಾರೆ. ಇದರ ಪರಿಣಾಮವಾಗಿ ದೌರ್ಜನ್ಯಗಳು ಹೆಚ್ಚಳವಾಗುತ್ತಿವೆ. ಹಾಗಾಗಿ ಶೌಚಾಲಯ ಸದ್ಬಳಕೆ ಬಗ್ಗೆ ಗ್ರಾಮ ಪಂಚಾಯಿತಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳು ಅರಿವು ಮೂಡಿಸಬೇಕು ಎಂದು ಹೇಳಿದರು.

ಶಾಲಾ, ಕಾಲೇಜುಗಳ ಸುತ್ತಮುತ್ತಲಿನ ಅಂಗಡಿಗಳಲ್ಲಿ ಮಾದಕ ದ್ರವ್ಯಗಳು ದೊರೆಯುತ್ತಿದ್ದು, ವಿದ್ಯಾರ್ಥಿಗಳು ವ್ಯಸನಿಗಳಾಗುತ್ತಿದ್ದಾರೆ. ಪೊಲೀಸರು ನಿಗಾವಹಿಸಿ ಕ್ರಮ ಕೈಗೊಳ್ಳಬೇಕು. ಪೊಲೀಸ್ ಠಾಣೆಗಳಿಗೆ ಮಹಿಳೆಯರು ಬರುವುದಕ್ಕೆ ಹೆದರುತ್ತಿರುವುದು ಇನ್ನೂ ಬಹುತೇಕ ಕಡೆಗಳಲ್ಲಿ ಇದೆ. ಮಹಿಳೆಯರಲ್ಲಿ ಭಯ ಹೋಗಲಾಡಿಸಲು ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಅರಿವು ಮೂಡಿಸಬೇಕು ಎಂದು ಎಸ್‌ಪಿಗೆ ಸೂಚಿಸಿದರು.

ಹೆಣ್ಣು ಮಕ್ಕಳು ವಿದ್ಯಾವಂತರಾದರೆ, ದೌರ್ಜನ್ಯಕ್ಕೆ ಕಡಿವಾಣ ಹಾಕಬಹುದಾಗಿದೆ. ಎಲ್ಲಾ ಹೆಣ್ಣು ಮಕ್ಕಳು ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ‘ಹೆಣ್ಣು ಮಕ್ಕಳು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿ ಸದಸ್ಯೆಯರಿಗೆ ಅರಿವು ಮೂಡಿಸಲಾಗುವುದು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ‘ಗ್ರಾಮೀಣ ಭಾಗದಲ್ಲಿ ಶೌಚಾಲಯ ಬಳಕೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅಂಗನವಾಡಿ, ಶಾಲೆಗಳಲ್ಲಿ ಸುಸಜ್ಜಿತ ಶೌಚಾಲಯಗಳ ನಿರ್ಮಾಣಕ್ಕೂ ಮುಂದಾಗಿದ್ದೇವೆ’ ಎಂದು
ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರವಾಡ್, ಡಿಡಿಪಿಐ ಸಿ.ನಂಜಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಹಾಜರಿದ್ದರು.

ಸಭೆಯ ನಂತರ ಎಸ್ಪಿ ಕಚೇರಿ ಆವರಣದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ನಡೆಯುತ್ತಿರುವ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾದಾಗ ಠಾಣೆಯಲ್ಲಿ ಸ್ನೇಹಪರ ವಾತಾವರಣ ನಿರ್ಮಿಸಿ ಪ್ರಕರಣಗಳನ್ನು ಇತ್ಯರ್ಥ
ಗೊಳಿಸುವಂತೆ ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT